ವಿಶೇಷ ಚೇತನರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಲು ಅಧಿಕಾರಿಗಳು ಆದ್ಯತೆ ನೀಡಿ - ಡಾ. ಓದ್ರಾಮ
ವಿಜಯಪುರ 17: ವಿಶೇಷ ಚೇತನರಿಗೆ ಸರ್ಕಾರದಿಂದ ದೊರೆಯಬೇಕಾದ ಸೌಲಭ್ಯಗಳನ್ನು ಸಮರ್ಕವಾಗಿ ತಲುಪಿಸುವುದರೊಂದಿಗೆ,2016ರ ವಿಶೇಷ ಚೇತನರ ಹಕ್ಕುಗಳ ಕಾಯ್ದೆಯನ್ವಯ ಕಾರ್ಯನಿರ್ವಹಿಸಿ, ಅವರಿಗೆ ಸಮಾನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿಶೇಷ ಚೇತನರ ಕುಂದುಕೊರತೆಗಳ ಪರಿಹಾರ ಹಾಗೂ ಡಿಸೆಂಬರ್ 3ರಂದು ಆಚರಿಸಲಾಗುವ ವಿಶ್ವ ವಿಶೇಷ ಚೇತನರ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಶೇಷ ಚೇತನರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ವಿಶೇಷ ಚೇತನರು ಸುಲಭವಾಗಿ ಪ್ರವೇಶಿಸಲು ಅನುಕೂಲವಾಗುವಂತೆ ಯಾಂರ್್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ನಗರದಲ್ಲಿಯೂ ವಿಶೇಷ ಚೇತನರಿಗೆ ಅನುಕೂಲವಾಗುವ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.
ಜಿಲ್ಲೆಯ ಎಲ್ಲ 13 ತಾಲೂಕುಗಳಲ್ಲಿಯೂ ತಾಲೂಕು ಮಟ್ಟದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಆಯೋಜಿಸಬೇಕು. ದಿನಾಚರಣೆಯ ಅಂಗವಾಗಿ ವಿಶೇಷ ಚೇತನರಿಗಾಗಿ ಕ್ರೀಡಾಕೂಟಗಳನ್ನು ಹಮ್ಮಿಕೊಂಡು, ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯ ನ್ಯಾಯಬೆಲೆ ಅಂಗಡಿಗಳಲ್ಲಿ ವಿಶೇಷ ಚೇತನರಿಗೆ ಮೊದಲ ಆದ್ಯತೆ ನೀಡಬೇಕು. ಬಸ್ಗಳಲ್ಲಿ ಅವರಿಗೆ ಮೀಸಲಾದ ಆಸನ ವ್ಯವಸ್ಥೆ ಕಲ್ಪಿಸಬೇಕು. ವಿಶೇಷ ಚೇತನರಿಗೆ ಸಾರ್ವಜನಿಕ ಸ್ಥಳಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ವಿಶೇಷ ಚೇತನರಿಗೆ ಅನುಕಂಪ ತೋರುವುದಕ್ಕಿಂತ ಅವರ ಸಾಮರ್ಥ್ಯ ಮತ್ತು ಹಕ್ಕುಗಳನ್ನು ಗೌರವಿಸಿ, ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ಅವರ ಅಗತ್ಯಗಳಿಗೆ ಸ್ಪಂದಿಸಿ, ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಯಾವುದೇ ನಿರ್ಲಕ್ಷ್ಯ ವಹಿಸಬಾರದು ಎಂದು ತಿಳಿಸಿದರು.
ವಿಶೇಷ ಚೇತನರಿಗಾಗಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಕಾಮಗಾರಿಯೂ ಶೀಘ್ರದಲ್ಲಿಯೇ ಆರಂಭವಾಗಲಿದೆ. 18 ವರ್ಷ ಮೇಲ್ಪಟ್ಟ ವಿಶೇಷ ಚೇತನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಅವಕಾಶವಿದ್ದು, ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಜಿಲ್ಲಾಡಳಿತದ ವತಿಯಿಂದ ಡಿಸೆಂಬರ್ 3ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾ ಮಟ್ಟದ ವಿಶ್ವ ವಿಶೇಷ ಚೇತನರ ದಿನಾಚರಣೆ ಆಯೋಜಿಸಲಾಗುವುದು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಚೇತನರು ಭಾಗವಹಿಸುವಂತೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ಮಲಾ ಸುರಪುರ, ವಿಕಲಚೇತನರ ಜಿಲ್ಲಾ ಅಧಿಕಾರಿ ಜಗದೀಶ್ ಕೆ., ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರ ಸಿದ್ದಪ್ಪ ಬಿಂಜಗೇರಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣನವರ, ಮಲ್ಲಿಕಾರ್ಜುನ, ವಿನೋದ ಖೇಡ, ಅಶೋಕ ವಾಲಿಕಾರ, ಮಹೇಶ ಮುಧೋಳ, ಶಶಿಕಲಾ ಸೋನಾರ್, ಮಹೇಶ ತೋಟದ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ವಿಶೇಷ ಚೇತನರು ಉಪಸ್ಥಿತರಿದ್ದರು.