ಕನ್ನಡದಲ್ಲೇ ಶುಭ ಹಾರೈಸಿದ ಪ್ರಧಾನಿ
ಬೆಂಗಳೂರು , ನ 11: ವೀರವನಿತೆ ಒನಕೆ ಓಬವ್ವ ಜಯಂತಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಈ ಕುರಿತು ಕನ್ನಡದಲ್ಲೇ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಒನಕೆ ಓಬವ್ವ ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ, ನಮಗೆ ಸ್ಫೂರ್ತಿ ನೀಡಿದ್ದಾರೆ ಎಂದಿದ್ದಾರೆ.
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ.
ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸದಾ ಸ್ಫೂರ್ತಿ ನೀಡುತ್ತಾರೆ ಎಂದೂ ಪ್ರಧಾನಿ ಟ್ವೀಟ್ ಸಂದೇಶದಲ್ಲಿ ಹೇಳಿದ್ದಾರೆ .ಓಬವ್ವ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾಡಿನ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.