ಸತ್ಯವನ್ನೇ ನುಡಿಯಬೇಕು, ಅಹಿಂಸೆಯ ಮಾರ್ಗದಲ್ಲಿ ನಡೆಯಬೇಕು: ಜಿಲ್ಲಾಧಿಕಾರಿ
ಧಾರವಾಡ, ಅ. 2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯವನ್ನೇ ನುಡಿಯಬೇಕು, ಅಹಿಂಸೆಯ ಮಾರ್ಗದಲ್ಲಿ ನಡೆಯಬೇಕು ಎಂದು ಸಾರಿದ್ದಾರೆ. ಸಾವಿರ ಸುಳ್ಳು ಹೇಳುವುದಕ್ಕಿಂತ ಒಂದೇ ಸತ್ಯವನ್ನು ನುಡಿಯುವುದು ಶ್ರೇಷ್ಠ. ಗಾಂಧೀಜಿಯವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹೇಳಿದರು.
ಧಾರವಾಡದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಅಹಿಂಸೆಯೆಂದರೆ ಎಲ್ಲರೊಂದಿಗೆ ಸಹಬಾಳ್ವೆಯಿಂದ ಬದುಕುವುದು. ನಮ್ಮ ಸುತ್ತಮುತ್ತಲಿನ ಜನರನ್ನು ದ್ವೇಷಿಸಬಾರದು ಹಾಗೂ ಇತರರನ್ನು ಹಿಂಸೆಯ ಮೂಲಕ ನೋಯಿಸಬಾರದು ಎಂದರು.
ಗಾಂಧೀಜಿಯವರು ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು. ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜೊತೆಗೆ ಶಾಂತಿ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಗಾಂಧೀಜಿಯವರ ತತ್ವಗಳು ಹಾಗೂ ಆದರ್ಶಗಳ ಕುರಿತು ಪ್ರತಿಯೊಬ್ಬರೂ ಅರಿವು ಮೂಡಿಸಿಕೊಂಡು ಅವುಗಳನ್ನು ಜೀವನದಲ್ಲಿ ಪಾಲಿಸಬೇಕು. ಗಾಂಧೀಜಿಯವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.