ಹತ್ರಾಸ್ ಅತ್ಯಾಚಾರ ಪ್ರಕರಣ: ಮುಖ್ಯಮಂತ್ರಿಯೊಂದಿಗೆ ಪ್ರಧಾನಿ ಚರ್ಚೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ
ಲಖನೌ, ಸೆ 30:ಹತ್ರಾಸ್ ಅತ್ಯಾಚಾರ ಘಟನೆ ಕುರಿತು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸಂಪೂರ್ಣ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಭೀಕರ ಘಟನೆ ಕುರಿತು ಚರ್ಚಿಸಿದ್ದಾರೆ.
ಪ್ರಧಾನಿ ಅವರೊಂದಿಗಿನ ಮಾತುಕತೆಯ ಬಗ್ಗೆ ಆದಿತ್ಯನಾಥ್ ಟ್ವೀಟ್ ಮಾಡಿದ್ದು, ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೋದಿಯವರು ಸೂಚಿಸಿರುವುದಾಗಿ ಹೇಳಿದ್ದಾರೆ.
ಮಾತುಕತೆಯ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲವಾದರೂ, ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಸ್ಥಾಪಿಸುವುದು ಮತ್ತು 10 ಲಕ್ಷ ರೂ.ಗಳ ಪರಿಹಾರ ನೀಡುವುದು ಸೇರಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿಯವರು ಪ್ರಧಾನಿಗೆ ಮಾಹಿತಿ ನೀಡಿದ್ದಾರೆ ಎಂದು ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಯುವತಿಯ ಶವ ಸಂಸ್ಕಾರವನ್ನು ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮಾಡಲಾಗಿದೆ ಎಂದು ಮುಖ್ಯಮಂತ್ರಿಯವರು ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಅಪರಾಧಿಗಳಿಗೆ ಶಿಕ್ಷೆ ವಿಧಿಸಲು ಸರ್ಕಾರ ತ್ವರಿತಗತಿಯ ವಿಚಾರಣೆಗೆ ಮುಂದಾಗಿದೆ ಎಂದು ಆದಿತ್ಯನಾಥ್ ಹೇಳಿದ್ದು, ತನಿಖೆಗಾಗಿ 3 ಸದಸ್ಯರ ಎಸ್ಐಟಿಯನ್ನು ಸ್ಥಾಪಿಸುವ ಬಗ್ಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.
ವರದಿಯನ್ನು ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಲಾಗಿರುವ ಎಸ್ಐಟಿಯಲ್ಲಿ ಗೃಹ ಕಾರ್ಯದರ್ಶಿ ಭಗವಾನ್ ಸ್ವರೂಪ್ ಮುಖ್ಯಸ್ಥರಾಗಲಿದ್ದು, ಡಿಐಜಿ ಚಂದ್ರ ಪ್ರಕಾಶ್ ಮತ್ತು ಕಮಾಂಡೆಂಟ್ ಪಿಎಸಿ ಆಗ್ರಾ ಎಂ.ಎಸ್ ಪೂನಂ ಸದಸ್ಯರಾಗಿದ್ದಾರೆ.
ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಸಂತ್ರಸ್ತೆಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.
ಏತನ್ಮಧ್ಯೆ, ಯುವತಿಯ ಶವಸಂಸ್ಕಾರವನ್ನು ಬಲವಂತವಾಗಿ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜೀನಾಮೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.