ಬಳ್ಳಾರಿ

ಮಕ್ಕಳ ಪ್ರತಿಭೆ ಗುರುತಿಸಲು ಪೋಷಕರು ಪ್ರೋತ್ಸಾಹ ನೀಡಬೇಕು: ಮೇಯರ್ ಪಿ. ಗಾದೆಪ್ಪ

ಮಕ್ಕಳ ಪ್ರತಿಭೆ ಗುರುತಿಸಲು ಪೋಷಕರು ಪ್ರೋತ್ಸಾಹ ನೀಡಬೇಕು: ಮೇಯರ್ ಪಿ. ಗಾದೆಪ್ಪ


            ಬಳ್ಳಾರಿ 24: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಹೊರತರುವ ನಿಟ್ಟಿನಲ್ಲಿ ಪೋಷಕರು ಪ್ರೋತ್ಸಾಹ ಹಾಗೂ ಸಹಕಾರ ನೀಡಬೇಕು. ಮಕ್ಕಳ ಆಸಕ್ತಿ ಮತ್ತು ಅಭಿರುಚಿಗೆ ತಕ್ಕಂತೆ ಅವಕಾಶ ಕಲ್ಪಿಸಿದಾಗ ಅವರು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಮಹಾನಗರ ಪಾಲಿಕೆಯ ಮಹಾಪೌರರಾದ ಪಿ. ಗಾದೆಪ್ಪ ಅವರು ಹೇಳಿದರು. 

                ಮಂಗಳವಾರ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿರುವ ಎರಡು ದಿನಗಳ ‘ಜಿಲ್ಲಾಮಟ್ಟದ ಕಲಾ ಪ್ರತಿಭೋತ್ಸವ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

                  ರಾಜ್ಯ ಸರ್ಕಾರವು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶದ ಮಕ್ಕಳಲ್ಲಿರುವ ಕಲಾ ಪ್ರತಿಭೆಗಳನ್ನು ಗುರುತಿಸಲು ಉತ್ತಮ ವೇದಿಕೆ ಕಲ್ಪಿಸುತ್ತಿದೆ. ಮಕ್ಕಳು ಇಂತಹ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದು ತಿಳಿಸಿದರು. 

               ಈ ಕಾರ್ಯಕ್ರಮದಲ್ಲಿ 600 ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುತ್ತಿರುವುದು ಸಂತೋಷದ ಸಂಗತಿ, ಸ್ಪರ್ಧೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ, ಆತ್ಮವಿಶ್ವಾಸ ಹಾಗೂ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸುವುದೇ ಅತ್ಯಂತ ಮುಖ್ಯ. ಇಂತಹ ವೇದಿಕೆಗಳು ಮಕ್ಕಳಲ್ಲಿನ ಕಲಾಸಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು. 

                  ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಅವರು ಮಾತನಾಡಿ, ಕಲೆ ಮತ್ತು ಸಂಸ್ಕೃತಿ ಮನುಷ್ಯನ ಜೀವನದಲ್ಲಿ ಮಹತ್ವದ ಸ್ಥಾನ ಹೊಂದಿವೆ. ವರನಟ ಡಾ. ರಾಜ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ತಮ್ಮ ಕಲಾ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ನಾಡಿನಾದ್ಯಂತ ಪ್ರಸಿದ್ಧಿ ಪಡೆದಿದ್ದಾರೆ.

            ಮಕ್ಕಳು ಚಿಕ್ಕ ವಯಸ್ಸಿನಿಂದಲೇ ಸಂಗೀತ, ನೃತ್ಯ, ನಾಟಕ ಸೇರಿದಂತೆ ವಿವಿಧ ಕಲಾ ಪ್ರಕಾರಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಜಿಲ್ಲಾ ಮಟ್ಟದ ಇಂತಹ ಕಲಾ ಪ್ರತಿಭೋತ್ಸವಗಳಲ್ಲಿ ಭಾಗವಹಿಸುವ ಅವಕಾಶ ಮಕ್ಕಳಿಗೆ ಅಮೂಲ್ಯ ಅನುಭವ ನೀಡುತ್ತದೆ. ಇಂದು ಸ್ಪರ್ಧೆಗಳಲ್ಲಿ ಭಾಗವಹಿಸುವ ಮಕ್ಕಳು ಮುಂದೆ ದೊಡ್ಡ ಸಾಧನೆ ಮಾಡಿದಾಗ ತಮ್ಮ ಬಾಲ್ಯದ ಇಂತಹ ವೇದಿಕೆಗಳನ್ನು ನೆನಪಿಸಿಕೊಂಡು ಸಂತೋಷ ಪಡುತ್ತಾರೆ.

            ನೃತ್ಯ ಮತ್ತು ಸಂಗೀತದಂತಹ ಕಲೆಗಳು ಮನುಷ್ಯನ ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ ಜೀವನದ ಒತ್ತಡವನ್ನು ಮರೆಸುವ ಶಕ್ತಿಯನ್ನು ಹೊಂದಿವೆ. ಆದ್ದರಿಂದ ಪೋಷಕರು ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು. 


ಸುದ್ದಿ ಓದಿ