ಕಾರವಾರ

ಹಾರವಾಡ ಕಡಲಕೊರೆತ ಪ್ರದೇಶಕ್ಕೆ ಶಾಶ್ವತ ಪರಿಹಾರ ಅಗತ್ಯ: ಸಚಿವ ಲಕ್ಷ್ಮಣ ಸವದಿ

ಹಾರವಾಡ ಕಡಲಕೊರೆತ ಪ್ರದೇಶಕ್ಕೆ ಶಾಶ್ವತ ಪರಿಹಾರ ಅಗತ್ಯ: ಸಚಿವ ಲಕ್ಷ್ಮಣ ಸವದಿ

ಲೋಕದರ್ಶನ ವರದಿ  

ಕಾರವಾರ, ಆ.06:  ಅಂಕೋಲಾ ತಾಲೂಕಿನ ಹಾರವಾಡ ಗ್ರಾಮದಲ್ಲಿ ಉಂಟಾಗಿರುವ ಕಡಲಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಪುಟ ದರ್ಜೆ ಸಚಿವ ಲಕ್ಷ್ಮಣ ಸವದಿ ಹೇಳಿದರು.  ಅವರು ಗುರುವಾರ ಹಾರವಾಡದ ಕಡಲಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರೀಶೀಲನೆ ನಡೆಸಿದರು. ಕಡಲಕೊರೆತದಿಂದ ಸಂಕಷ್ಟಕ್ಕೆ ಒಳಗಾಗಿರುವ ನಿವಾಸಿಗಳೊಂದಿಗೆ ಮಾತುಕತೆ ನಡೆಸಿ, ಪ್ರಸ್ತುತ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.  ಕಡಲಕೊರೆತ ತಡೆಗಟ್ಟಲು ವೈಜ್ಞಾನಿಕ ರೀತಿಯಲ್ಲಿ ಶಾಶ್ವತ ತಡೆಗೋಡೆ ನಿರ್ಮಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಮನೆಗಳು ಹಾಗೂ ಕೃಷಿ ಭೂಮಿ ಸಮುದ್ರ ಪಾಲಾಗುವ ಅಪಾಯವಿದೆ. ಕರಾವಳಿ ಭಾಗದ ಜನರ ಜೀವ ಮತ್ತು ಆಸ್ತಿಯ ರಕ್ಷಣೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.  

ಈ ವೇಳೆ ಸ್ಥಳೀಯರು ಸಚಿವರ ಮುಂದೆ ತಮ್ಮ ಅಳಲು ತೋಡಿಕೊಂಡರು. ಈ ವರ್ಷ ಮಳೆ, ಗಾಳಿ ಹಾಗೂ ಸಮುದ್ರದ ಅಲೆಗಳ ತೀವ್ರತೆ ಕಳೆದ ವರ್ಷಗಳಿಗೆ ಹೋಲಿಸಿದರೆ ಕಡಿಮೆ ಇದ್ದರೂ ಕಡಲಕೊರೆತ ಉಂಟಾಗಿದೆ. ಸಮುದ್ರ ತೀರದ ಹಲವು ಮನೆಗಳು ಅಪಾಯದ ಅಂಚಿನಲ್ಲಿವೆ. ಪ್ರತಿ ವರ್ಷ ಮಳೆಗಾಲದಲ್ಲಿ ಇದೇ ಸಮಸ್ಯೆ ಮರುಕಳಿಸುತ್ತಿದ್ದು, ಕರಾವಳಿ ನಿವಾಸಿಗಳು ಆತಂಕದಲ್ಲೇ ಜೀವನ ಸಾಗಿಸುವಂತಾಗಿದೆ ಎಂದು ಹೇಳಿದರು.  ಈ ಹಿಂದೆ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಸಚಿವರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದರೂ ಶಾಶ್ವತ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಸ್ಥಳೀಯರು ತಿಳಿಸಿದರು.  

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯುನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಕೆ. ಸೈಲ್, ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ, ಯಲ್ಲಾಪುರ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್, ಕುಮಟಾ ಶಾಸಕ ದಿನಕರ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲೀಪ್ ಶಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ