ಹೆಮ್ಮೆಯ ನಟ ಪುನೀತ್ ರಾಜ್ ಕುಮಾರ್ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ
ಮೈಸೂರು: ಮಾರ್ಚ್ 13: ಕನ್ನಡಿಗರ ನೆಚ್ಚಿನ ಅಪ್ಪು ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಹೇಮಂತ್ ಕುಮಾರ್ ಅವರು ಇಂದು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಈ ವಿಚಾರವನ್ನು ಪ್ರಕಟಿಸಿದರು.
ಮೈಸೂರು ವಿಶ್ವ ವಿದ್ಯಾನಿಲಯವು 1976, ಫೆಬ್ರವರಿ 8 ರಂದು ವರನಟ ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ನೀಡಿತ್ತು. ಈಗ ರಾಜ್ ಕುಮಾರ್ ಅವರ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ಅವರು ಕೂಡ ತಂದೆಯಂತೆ ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ.
ನಟ ಪುನೀತ್ ರಾಜ್ ಕುಮಾರ್ ಕಳೆದ ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಕುಟುಂಬ ವರ್ಗ ಸೇರಿದಂತೆ ದೇಶ, ವಿದೇಶಗಳ ಅಭಿಮಾನಿಗಳಲ್ಲಿ ತೀವ್ರ ದುಃಖವನ್ನುಂಟುಮಾಡಿತ್ತು.
ಮಾರ್ಚ್ 22 ರಂದು ಮೈಸೂರು ವಿಶ್ವ ವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಲ್ಲಿ ನಡೆಯುವ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುವರು ಎಂದು ಮೈಸೂರು ವಿವಿ ತಿಳಿಸಿದೆ.