ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ :ಸಚಿವ ರುದ್ರ್ಪ ಲಮಾಣಿ
ಲೋಕದರ್ಶನ ವರದಿ
ಹಾವೇರಿ 7: ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಜಾರಿಗೆ ತರಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಸಕ್ಕರೆ ಮತ್ತು ಜವಳಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಹೇಳಿದರು.
ಹಾವೇರಿ ನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ತಾಲೂಕು ಆಡಳಿತದ ಸಹಯೋಗದಲ್ಲಿ ತಾಲೂಕು ಮಟ್ಟದ ಪ್ರಜಾ ಸೇವಾ ಆಂದೋಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ಸಣ್ಣಪುಟ್ಟ ಕೆಲಸಗಳಿಗೂ ತಾಲೂಕು ಹಾಗೂ ಜಿಲ್ಲಾ ಮಟ್ಟದ ಕಚೇರಿಗಳಿಗೆ ಹಲವು ಬಾರಿ ಅಲೆದಾಡುವ ಪರಿಸ್ಥಿತಿಯಿದೆ. ಇದರಿಂದ ಸಮಯ ಮತ್ತು ಹಣ ವ್ಯರ್ಥವಾಗುವುದರ ಜೊತೆಗೆ ಅನಗತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಿ ಜನರ ಬಳಿಯೇ ಆಡಳಿತವನ್ನು ಕೊಂಡೊಯ್ಯುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪ್ರಜಾಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.
ಇದಕ್ಕಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸುವ ಮೂಲಕ ಸಾರ್ವಜನಿಕರ ಅರ್ಜಿಗಳ ವಿಲೇವಾರಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಈಗಾಗಲೇ ಸುಮಾರು 1,500 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಈ ಪೈಕಿ ಸುಮಾರು 1,200 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದ 300 ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳು ಆದ್ಯತೆ ನೀಡಬೇಕು. ಸ್ಥಳೀಯ ಮಟ್ಟದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ವಿಳಂಬ ಮಾಡದೆ ಪರಿಹರಿಸಬೇಕು. ಸರ್ಕಾರದ ಅಥವಾ ವಿಭಾಗೀಯ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಬೇಕಾದ ಸಮಸ್ಯೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
ಯಾವುದೇ ಅರ್ಜಿಯನ್ನು ಕಾರಣವಿಲ್ಲದೆ ಬಾಕಿ ಉಳಿಸಿಕೊಳ್ಳಬಾರದು ಸಮಸ್ಯೆ ಪರಿಹಾರ ಸಾಧ್ಯವಿಲ್ಲದಿದ್ದರೆ ಅದಕ್ಕೆ ಸೂಕ್ತ ಕಾರಣ ತಿಳಿಸಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಅಹವಾಲುಗಳನ್ನು ಆಲಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಡುವೆ ಸಮನ್ವಯ ಹೆಚ್ಚಿಸುವ ಮೂಲಕ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು. ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಪ್ರಜಾಸೇವಾ ಆಂದೋಲನ ಆಯೋಜಿಸಲಾಗುವುದು ಎಂದು ಹೇಳಿದರು.