ವಿದ್ಯಾರ್ಥಿಗಳ ಪ್ರತಿಭೆ ಹೊರಹೊಮ್ಮಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ:ಎಲ್.ಟಿ.ಪಾಟೀಲ
ಲೋಕದರ್ಶನ ವರದಿ
ಮುಂಡಗೋಡ:ನಾಡಿನ ಕಲೆ ಮತ್ತು ಸಂಸ್ಕೃತಿಗಳನ್ನು ಶಾಶ್ವತವಾಗಿ ಉಳಿಸುವ ಉದ್ದೇಶದಿಂದ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳನ್ನು ಸರ್ಕಾರ ಜಾರಿಗೆ ತಂದಿದೆ ಎಂದು ಜಿ.ಪಂ.ಮಾಜಿ ಸದಸ್ಯ ಎಲ್.ಟಿ.ಪಾಟೀಲ ಹೇಳಿದರು.
ಪಟ್ಟಣದ ಎಲ್.ವಿ.ಕೆ.ಸಭಾಂಗಣದಲ್ಲಿ ಜಿ.ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಎಲೆಮರೆ ಕಾಯಿಯಂತಿರುವ ವಿದ್ಯಾರ್ಥಿಗಳ ಪ್ರತಿಭೆ ಹೊರ ಹೊಮ್ಮಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿ ಜೀವನದಿಂದಲೇ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರ ಜೊತೆಗೆ ಕಲೆಯನ್ನು ನಿರಂತರವಾಗಿ ಮೈಗೂಡಿಸಿಕೊಂಡು ಮುಂದುವರಿಯಬೇಕು. ತಾಲೂಕಿನಲ್ಲಿ ಶಿಕ್ಷಣಕ್ಕೆ ಬೇಕಾದ ಎಲ್ಲ ಸೌಕರ್ಯ ಒದಗಿಸಲಾಗಿದೆ ಎಂದರು. ಭಾರತ ಸೇವಾದಳದ ತಾಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ ಮಾತನಾಡಿ ಕೇವಲ ಶ್ರೀಮಂತರ ಮಕ್ಕಳಿಗೆ ಮಾತ್ರ ಕಲೆ ಮತ್ತು ಸಂಗೀತ ಸೀಮಿತವಾಗಿರಬಾರದು ಬಡವರ ಮಕ್ಕಳಿಗೂ ದೊರಕಬೇಕು ಎನ್ನುವ ದೃಷ್ಟಿಯಿಂದ ಸರ್ಕಾರ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.
ಪ.ಪಂ.ಅಧ್ಯಕ್ಷೆ ಜಯಸುಧಾ ಭೋವಿವಡ್ಡರ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಶ್ರೀಕಾಂತ ಸಾನು, ಎಸ್.ಡಿ.ಮುಡೆಣ್ಣವರ, ರಮೇಶ ಅಂಬಿಗೇರ, ಪ್ರದೀಪ ಕುಲಕರ್ಣಿ, ಶೀಲಾ ರಾಠೋಡ, ಪಾಂಡುರಂಗ ಟಿಕ್ಕೋಜಿ, ನಾಗರಾಜ, ದಯಾನಂದ ನಾಯ್ಕ, ಎಸ್.ಕೆ.ಬೋರಕರ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಉಪಸ್ಥಿತರಿದ್ದರು. ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಆರ್.ಗಾಣಿಗೇರ ಸ್ವಾಗತಿಸಿದರು. ಶಿಕ್ಷಕ ಬಾಲಚಂದ್ರ ಹೆಗಡೆ ನಿರೂಪಿಸಿದರು. ಕ್ಷೇತ್ರ ಸಮನ್ವಯ ಅಧಿಕಾರಿ ಜಿ.ಎನ್.ನಾಯ್ಕ ವಂದಿಸಿದರು.
ಛದ್ಮವೇಷ, ಭರತನಾಟ್ಯ ಮತ್ತು ಜಾನಪದ ನೃತ್ಯ ಸ್ಪರ್ಧೆಗಳು ಜರುಗಿದವು.