ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರ ನೇಮಕಕ್ಕೆ ಸಿದ್ಧತೆ ; ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹ: ವಿನಯ ನಾವಲಗಟ್ಟಿ
ಚಿಕ್ಕೋಡಿ 28 : ಕಾಂಗ್ರೆಸ್ ಸಂಘಟನಾ ಸೃಜನ ಅಭಿಯಾನದ ಎರಡನೇ ಹಂತದಲ್ಲಿ ಬ್ಲಾಕ್ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದ್ದು, ಪಕ್ಷದ ಸಂಘಟನೆಗೆ ಶ್ರಮಿಸುವ ಉತ್ಸಾಹಿ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಎಂದು ಕೆಪಿಸಿಸಿ ವೀಕ್ಷಕ ವಿನಯ ನಾವಲಗಟ್ಟಿ ತಿಳಿಸಿದರು.ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಎರಡನೇ ಹಂತದಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಬ್ಲಾಕ್ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಯಮಕನಮರಡಿ, ಹುಕ್ಕೇರಿ, ನಿಪ್ಪಾಣಿ, ಚಿಕ್ಕೋಡಿ, ರಾಯಬಾಗ, ಕುಡಚಿ, ಕಾಗವಾಡ ಹಾಗೂ ಅಥಣಿ ವಿಧಾನಸಭಾ ಕ್ಷೇತ್ರಗಳಲ್ಲಿ ಬ್ಲಾಕ್ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯಲಿದೆ. ಆಯಾ ಕ್ಷೇತ್ರಗಳಿಗೆ ವೀಕ್ಷಕರ ತಂಡ ಭೇಟಿ ನೀಡಿ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಿದೆ ಎಂದು ತಿಳಿಸಿದರು.
ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುವ ಹಾಗೂ ಸಂಘಟನೆಯನ್ನು ಬಲಪಡಿಸುವ ಸಾಮರ್ಥ್ಯ ಹೊಂದಿರುವ ಕಾರ್ಯಕರ್ತರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಂಘಟನಾ ಕಾರ್ಯದಲ್ಲಿ ಉತ್ಸಾಹದಿಂದ ತೊಡಗಿಸಿಕೊಂಡವರಿಗೆ ಬ್ಲಾಕ್ ಅಧ್ಯಕ್ಷರಾಗುವ ಅವಕಾಶವಿದ್ದು, ಕಾರ್ಯಕರ್ತರು ಈ ಪ್ರಕ್ರಿಯೆಗೆ ಸಜ್ಜಾಗಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವೀಕ್ಷಕರ ತಂಡದ ಸುನೀಲ ಹನುಮಣ್ಣವರ, ಅಲ್ತಾಫ್ ಹಳ್ಳೂರ, ರಕ್ಷಿತಾ ಈಟಿ,
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಎಚ್.ಎಸ್. ನಸಲಾಪೂರೆ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ವೀರಕುಮಾರ ಪಾಟೀಲ, ಮಹಾವೀರ ಮೋಹಿತೆ. ರಾಜು ಕೊಟಗಿ, ಅನಿಲ ಪಾಟೀಲ, ಸತೀಶ ಕುಲಕರ್ಣಿ.ಪ್ರಭಾಕರ ಕೋರೆ. ಮಹಾದೇವ ಕವಲಾಪೂರೆ. ಸುಪ್ರೀಯಾ ಪಾಟೀಲ ಸೇರಿದಂತೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮುಖಂಡರು ಉಪಸ್ಥಿತರಿದ್ದರು.