ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತಾ ಸಭೆ
ಬಳ್ಳಾರಿ.25: ಜಿಲ್ಲಾಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ನ.1ರಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಇದಕ್ಕೆ ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಸೂಚನೆ ನೀಡಿದರು.
ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರಕಾರದ ಮಾರ್ಗಸೂಚಿ ಅನ್ವಯ ನ.1ರಂದು ಬೆಳಗ್ಗೆ 9ಕ್ಕೆ ನಗರದ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿ ಮಾಲಪಾಟಿ ಅವರು ಕೋವಿಡ್ ಮೂರನೇ ಅಲೆಯು ಎದುರಾಗುವ ಸಂಭವವಿದ್ದು, ಕೊರೊನಾ ಹರಡುವಿಕೆಯನ್ನು ಸಂಪೂರ್ಣವಾಗಿ ತಡೆಯುವ ಉದ್ದೇಶದಿಂದ ಈ ಬಾರಿ ರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ. ಎಲ್ಲಾ ಕನ್ನಡ ಪರ ಸಂಘಟನೆಗಳು ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಎಂದರು.
ಶಾಲೆ-ಕಾಲೇಜಿನ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಸೇರಿದಂತೆ ಒಂದು ವಾರಗಳ ಕಾಲ ವಿವಿಧ ಕಾರ್ಯಕ್ರಮಗಳ ಮೂಲಕ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಗುತ್ತದೆ. ನಗರದಲ್ಲಿ ಯಾವುದೇ ರೀತಿಯ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಕೋವಿಡ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ನಂತರ ಮುಂದಿನ ವರ್ಷದಿಂದ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಣೆ ಮಾಡೋಣ ಎಂದರು.
*ಅ.31ರೊಳಗೆ ನಾಮಫಲಕ ಅಳವಡಿಕೆ: ರೆಸ್ಟೋರೆಂಟ್, ಅಂಗಡಿಮುಂಗಟ್ಟು ಸೇರಿದಂತೆ ನಗರದ ಎಲ್ಲಾ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ನಾಮಫಲಕ ಅಳವಡಿಸಬೇಕು. ಅ.31ರೊಳಗಾಗಿ ಸಂಪೂರ್ಣವಾಗಿ ನಾಮಫಲಕ ಅಳವಡಿಸುವ ಕಾರ್ಯ ಆಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿ ಮಾಲಪಾಟಿ ಅವರು ನ.1ರಿಂದ ಒಂದು ವಾರದ ಕಾಲ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರಗಳು ಪ್ರದರ್ಶಿಸುವಂತೆ ಸೂಚಿಸಿದರು.
500 ಜನರು ಮೀರದಂತೆ ಮೆರವಣಿಗೆ ಮಾಡಲಾಗುವುದು, ಮೆರವಣಿಗೆಗೆ ಅವಕಾಶ ಮಾಡಿಕೊಡುವಂತೆ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳ ಮನವಿಗೆ ಉತ್ತರಿಸಿದ ಜಿಲ್ಲಾಧಿಕಾರಿಗಳು ಸರ್ಕಾರದ ಮಾರ್ಗಸೂಚಿ ಅನ್ವಯ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದರು.
ಗಡಿ ಹಂಚಿಕೊಂಡಿರುವ ಕಾರಣ ತೆಲುಗು ಪ್ರಾಬಲ್ಯವಿದ್ದು, ದಿನೇ ದಿನೇ ಕನ್ನಡ ಭಾಷೆ ಬಳಸುವುದು ಜಾಸ್ತಿಯಾಗುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಕನ್ನಡ ಭಾಷೆ ಬಳಸುವಂತಾಗುತ್ತದೆ ಎಂದರು.
*ಕನ್ನಡ ಗೀತೆಗಳ ಗಾಯನ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಇದೇ 28 ರಂದು ಏಕ ಕಾಲದಲ್ಲಿ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 11ಕ್ಕೆ ‘ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕು' ಸೇರಿದಂತೆ ಮೂರು ಗೀತೆಗಳನ್ನು ನಿಯೋಜಿಸಿದ ಕಲಾ ತಂಡದ ಸದಸ್ಯರು ಹಾಡಲಿದ್ದಾರೆ.
ಬಳ್ಳಾರಿಯ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ, ಸಿರುಗುಪ್ಪದ ಅಭಯಾಂಜಿನೇಯ ದೇವಸ್ಥಾನದ ಆವರಣ, ಸಂಡೂರಿನ ದೋಣಿಮಲೈನ ದೋಣಿ ಬಯಲು ರಂಗಮಂದಿರ, ಕುರುಗೋಡು ಮತ್ತು ಮೋಕಾ ಸಮುದಾಯ ಭವನಗಳಲ್ಲಿ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ್ ಕೆ.ರಂಗಣ್ಣನವರ್ ಅವರು ಸಭೆಗೆ ವಿವರಿಸಿದರು.
ರಾಜ್ಯೋತ್ಸವದ ಅಂಗವಾಗಿ ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ಕನ್ನಡ ಮಾತನಾಡುವ ಸ್ಪರ್ಧೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ, ಎಸಿ ಆಕಾಶ್ ಶಂಕರ್, ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಡಿಡಿಪಿಐ ರಾಮಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಇದ್ದರು.