ವಿಜಯಪುರ

ಕುಡಿಯುವ ನೀರು, ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸೂಚನೆ

ಕುಡಿಯುವ ನೀರು, ವಿದ್ಯುತ್ ಪೂರೈಕೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸೂಚನೆ

ಲೋಕದರ್ಶನ ವರದಿ 

ವಿಜಯಪುರ 3: ಜಿಲ್ಲೆಯಲ್ಲಿ ಕುಡಿಯುವ ನೀರಿನ ಲಭ್ಯತೆ, ಮುಂಗಾರು ಮಳೆಯ ಪರಿಸ್ಥಿತಿ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀಮತಿ ಖುಷ್ಬು ಗೋಯಲ್ ಚೌಧರಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರೀಶೀಲನಾ ಸಭೆ ನಡೆಸಿ, ಕುಡಿಯುವ ನೀರು ಮತ್ತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಳೆಯ ಕೊರತೆ ಉಂಟಾದರೆ ಪರ್ಯಾಯ ನೀರಿನ ಮೂಲಗಳನ್ನು ಸಜ್ಜುಗೊಳಿಸಬೇಕು. ನೀರಿನ ಸಂರಕ್ಷಣೆ, ಪರ್ಯಾಯ ಸರಬರಾಜು ವ್ಯವಸ್ಥೆ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಸಂಬಂಧಿಸಿದ  ಇಲಾಖೆಗಳು ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.  

ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯನ್ನು ನಿರಂತರವಾಗಿ ಕಾಪಾಡಬೇಕು. ಯಾವುದೇ ಗ್ರಾಮ ವಿದ್ಯುತ್ ಸೌಲಭ್ಯದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಹಾಗೂ ರೈತರಿಗೆ ನಿಗದಿತ ಅವಧಿಯಲ್ಲಿ ಸಮರ​‍್ಕ ವಿದ್ಯುತ್ ಪೂರೈಕೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.  ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಮಾತನಾಡಿ, ಜಿಲ್ಲೆಯ ಮಳೆ ಪರಿಸ್ಥಿತಿ, ವಿಪತ್ತು ನಿರ್ವಹಣೆಗೆ ಕೈಗೊಂಡಿರುವ ಸಿದ್ಧತೆ ಹಾಗೂ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಪ್ರಗತಿ ಕುರಿತು ಮಾಹಿತಿ ನೀಡಿದರು. ಮನೆ ಮನೆಗೆ ತೆರಳಿ ಮತದಾರರ ವಿವರ ಸಂಗ್ರಹಿಸುವ ಕಾರ್ಯ ಸುಸೂತ್ರವಾಗಿ ನಡೆಯುತ್ತಿದೆ ಎಂದು ತಿಳಿಸಿದರು.  

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಋಷಿ ಆನಂದ್ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತು ವಿವರಿಸಿದರು.  ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿಷೇಕ್ ಸೆಹರಾ, ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ