ಮಕ್ಕಳ ಸಮಗ್ರ ಬೆಳವಣಿಗೆಗೆ ಗುಣಮಟ್ಟದ ಅಂಗನವಾಡಿ ಕೇಂದ್ರಗಳ ನಿರ್ಮಾಣಕ್ಕೆ ಆದ್ಯತೆ: ಸುಧೀರ್ ಕೊಳ್ಳಳ್ಳಿ
ಯಲಬುರ್ಗಾ 21: ಮಕ್ಕಳ ಆರಂಭಿಕ ಕಲಿಕಾ ಸಾಮರ್ಥ್ಯವನ್ನು ವೃದ್ಧಿಸುವುದರ ಜೊತೆಗೆ ಅವರ ಶೈಕ್ಷಣಿಕ ಹಾಗೂ ಸರ್ವತೋಮುಖ ಬೆಳವಣಿಗೆಗೆ ಶಾಲಾ ಪೂರ್ವ ಶಿಕ್ಷಣ ಮಹತ್ವದ ಪಾತ್ರ ವಹಿಸುತ್ತಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಶಾಲಾ ಪೂರ್ವ ಶಿಕ್ಷಣ ವ್ಯವಸ್ಥೆಯು ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ಭದ್ರ ಬುನಾದಿಯಾಗಿದ್ದು, ದೇಶಕ್ಕೆ ಮಾದರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕೊರ್ಲಳ್ಳಿ ಹೇಳಿದರು.
ಪಟ್ಟಣದ 12ನೇ ವಾರ್ಡ್‌ನಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಡಿ 21.80 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ 17ನೇ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉನ್ನತ ಶಿಕ್ಷಣ ಸಚಿವರು ಹಾಗೂ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಯಲಬುರ್ಗಾ ಪಟ್ಟಣದಲ್ಲಿ ಅರ್ಧ ಎಕರೆ ಜಾಗದಲ್ಲಿ ಸುಮಾರು 3.17 ಕೋಟಿ ವೆಚ್ಚದಲ್ಲಿ ಬಾಲಭವನ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಅದೇ ರೀತಿ ಕುಕನೂರಿನಲ್ಲಿಯೂ ಸುಮಾರು ?1 ಕೋಟಿ ಅನುದಾನದಲ್ಲಿ ಬಾಲಭವನ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಕ್ಷೇತ್ರದಲ್ಲಿ ಸುಮಾರು 49 ನೂತನ ಅಂಗನವಾಡಿ ಕೇಂದ್ರಗಳು ಮಂಜೂರಾಗಿದ್ದು, ಅವುಗಳ ಕಟ್ಟಡ ನಿರ್ಮಾಣಕ್ಕೂ ಅಗತ್ಯ ಅನುದಾನ ಒದಗಿಸಲಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರ ಸರ್ವತೋಮುಖ ಅಭಿವೃದ್ಧಿಗೆ ಶಾಸಕರು ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಸರ್ಕಾರದ ಜನಪರ ಯೋಜನೆಗಳನ್ನು ಸಾರ್ವಜನಿಕರು ಸಮರ್ಕವಾಗಿ ಬಳಸಿಕೊಂಡು ಅದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.
ಸಿಡಿಪಿಒ ಅಧಿಕಾರಿ ಹಾಗೂ ಕುಕನೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬೆಟದೇಶ ಮಾಳೇಕೊಪ್ಪ ಮಾತನಾಡಿ, ಯಲಬುರ್ಗಾ ಮತ್ತು ಕುಕನೂರು ತಾಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ವಿವಿಧ ರಾಜ್ಯಗಳ ಅಧಿಕಾರಿಗಳು ಇಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ವ್ಯವಸ್ಥೆಯನ್ನು ಪರೀಶೀಲಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.
ಮಕ್ಕಳ ಕಲಿಕೆ ಮತ್ತು ಅನುಕೂಲಕ್ಕಾಗಿ ಸುಸಜ್ಜಿತ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ ಹಾಗೂ ಮಾಜಿ ಸದಸ್ಯ ಕಳಕಪ್ಪ ತಳವಾರ ಮಾತನಾಡಿದರು. ಈ ಸಂದರ್ಭದಲ್ಲಿ ಭೂನ್ಯಾಯ ಮಂಡಳಿ ಸದಸ್ಯ ಮಲ್ಲಿಕಾರ್ಜುನ ಜಕ್ಕಲಿ, ನಿರ್ಮಿತಿ ಕೇಂದ್ರದ ಅಧಿಕಾರಿ ಮಹಾದೇವಪ್ಪ ಪತ್ತಾರ, ಮುಖಂಡರಾದ ದೊಡ್ಡಯ್ಯ ಗುರುವಿನ್, ಲಲಿತಾ ನಾಯಕ, ಮಾಧವಿ ವೈದ್ಯ, ಜಯಶ್ರೀ ಕುದರಿ, ಅಂಗನವಾಡಿ ಕಾರ್ಯಕರ್ತೆ ಸಾವಿತ್ರಿ ಅಂಗಡಿ, ಪ್ರೇಮಾ ಹುಬ್ಬಳ್ಳಿ ಸೇರಿದಂತೆ ಗಣ್ಯರು, ಸ್ಥಳೀಯರು ಹಾಗೂ ಮಕ್ಕಳು ಉಪಸ್ಥಿತರಿದ್ದರು.