ಇಂಡಿ ಮತ್ತು ಚಡಚಣ ತಾಲೂಕುಗಳ ವಿವಿಧ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ
ಇಂಡಿ : ತಾಲೂಕು ಪಂಚಾಯಿತಿ ಕಾರ್ಯಾಲಯ ಆವರಣದಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ ಆನಂದ ಪ್ರಕಾಶ ಮೀನಾ ಅವರ ಅಧ್ಯಕ್ಷತೆಯಲ್ಲಿ ಇಂಡಿ ಮತ್ತು ಚಡಚಣ ತಾಲೂಕುಗಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿವಿಧ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ ಜರುಗಿತು.ಸಭೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು, ಇ-ಸ್ವತ್ತು ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವುದು. ಭಾರತ ಜೋಡೋ ಪ್ರಗತಿ, ಹಾಗೂ ಬಾಕಿ ಇರುವ ವಸತಿ ಯೋಜನೆಗಳಡಿ ಮನೆ ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ, ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿತರಾಗಿರುವ ಅರ್ಹ ಕೂಲಿಕಾರರಿಗೆ ಉದ್ಯೋಗ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವುದರ ಜೊತೆಗೆ, ಕೂಲಿಕಾರರಿಗೆ ನಿಗದಿತ ಅವಧಿಯೊಳಗೆ ಕೂಲಿ ಪಾವತಿಯಾಗುವಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಮಹದೇವಪ್ಪ ಏವೂರ, ಚಡಚಣ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಅಶೋಕ ಕುಮಾರ ರಾಠೋಡ, ಇಂಡಿ ಗ್ರಾಮೀಣ ಕುಡಿಯುವ ನೀರು ಅಭಿಯಂತರರು ಎಸ್ ಆರ್ ಬಂಡಿ, ಇಂಡಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರು (ಗ್ರಾ.ಉ.) ಸಂಜಯ ಖಡೆಗೆಕರ್, ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್) ಪ್ರಕಾಶ ರಾಠೋಡ, ಚಡಚಣ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರು (ಪಂಚಾಯತ್ ರಾಜ್) ಶಿವದತ್ತ ಕೊಟ್ಟಲಗಿ, ತಾಲೂಕು ಯೋಜನಾಧಿಕಾರಿಗಳು, ಸಹಾಯಕ ಲೆಕ್ಕಾಧಿಕಾರಿಗಳು, ಇಂಡಿ ಮತ್ತು ಚಡಚಣ ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.