ಸಂಡೂರಿನಲ್ಲಿ ಬಾಲಕಾರ್ಮಿಕರ ರಕ್ಷಣೆ

ಸಂಡೂರಿನಲ್ಲಿ ಬಾಲಕಾರ್ಮಿಕರ ರಕ್ಷಣೆ  Protection of child laborers in Sandur

ಬಳ್ಳಾರಿ 26:  ಸಂಡೂರು ತಾಲೂಕಿನ ಚೋರನೂರು ಹೋಬಳಿ ವ್ಯಾಪ್ತಿಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಂಟಿ ಆಶ್ರಯದಲ್ಲಿ ಗುರುವಾರ ಹಠಾತ್ ದಾಳಿ ನಡೆಸಿ, ಇಬ್ಬರು ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಸಂಡೂರು ತಾಲೂಕಿನ ಚೋರನೂರು ಹೋಬಳಿ ವ್ಯಾಪ್ತಿಯ ಸುಮಾರು 25 ಉದ್ದಿಮೆ ಹಾಗೂ ಅಂಗಡಿ ಮುಂಗಟ್ಟುಗಳ ಮೇಲೆ ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿ ಸದಸ್ಯರು ಜಂಟಿಯಾಗಿ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಕಾನೂನು ಬಾಹಿರವಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಿ, ಕೆಲಸದಿಂದ ಮುಕ್ತಿಗೊಳಿಸಲಾಗಿದೆ. ರಕ್ಷಿಸಲ್ಪಟ್ಟ ಮಕ್ಕಳನ್ನು ಅವರು ಈ ಹಿಂದೆ ವ್ಯಾಸಂಗ ಮಾಡುತ್ತಿದ್ದ ಶಾಲೆಗೆ ಮರು ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ವಯಸ್ಸಿನ ದಾಖಲಾತಿಗಳನ್ನು ಪಡೆದುಕೊಂಡಿರುವ ಅಧಿಕಾರಿಗಳು, ಬಾಲಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಮಾಲೀಕರ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಬಾಲಕಾರ್ಮಿಕ ಕಾಯ್ದೆಯಡಿ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಇದೇ ವೇಳೆ, ಇನ್ನು ಮುಂದೆ ಅಂಗಡಿ ಮತ್ತು ಉದ್ದಿಮೆಗಳಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ಕೆಲಸಕ್ಕೆ ನೇಮಿಸಿಕೊಳ್ಳಬಾರದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿ, ಪೋಸ್ಟರ್ಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಂದಾಯ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಮತ್ತು ಚೈಲ್ಡ್‌ ಲೈನ್ ಸಹಯೋಗದಲ್ಲಿ ಈ ಜಂಟಿ ಕಾರ್ಯಾಚರಣೆ ನಡೆದಿದೆ. ಈ ಟಾಸ್ಕ್‌ ಫೋರ್ಸ್‌ ಸಮಿತಿಯಲ್ಲಿ ಗ್ರೇಡ್‌-2 ತಹಶೀಲ್ದಾರ್ ಸುಧಾ, ಸಂಡೂರಿನ ಕಾರ್ಮಿಕ ನೀರೀಕ್ಷಕ ಮಂಜುನಾಥ ತೊಂಡೆಹಾಳ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ. ಮೌನೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಚ್‌. ಎನ್‌. ಸುರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕರಾದ ಸುನೀತಾ, ಮಕ್ಕಳ ರಕ್ಷಣಾ ಘಟಕದ ಅರುಳ್ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಚಂದ್ರಕಲಾ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.