ಸೌಂದತ್ತಿ

ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ವ್ಯವಸೆಗೆ ಆಗ್ರಹಿಸಿ ಪ್ರತಿಭಟನೆ, ಮನವಿ

ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ ವ್ಯವಸೆಗೆ ಆಗ್ರಹಿಸಿ ಪ್ರತಿಭಟನೆ, ಮನವಿ

ಸವದತ್ತಿ 29: ಕರ್ನಾಟಕ ಸರಕಾರ ಶಕ್ತಿ ಯೋಜನೆ ಜಾರಿ ಮಾಡಿದಾಗಿನಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಶಾಲಾ ಕಾಲೇಜುಗಳಿಗೆ ಗ್ರಾಮೀಣ ಪ್ರದೇಶದಿಂದ ಬರುವಂತ ವಿದ್ಯಾರ್ಥಿಗಳಿಗೆ ಹೆಚ್ಚಿನ ತೊಂದರೆಯಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ತಾಲೂಕು ಘಟಕದಿಂದ ಸವದತ್ತಿ ಬಸ್ಸ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಗಿದೆ. 

ಎಬಿವಿಪಿ ಜಿಲ್ಲಾ ಸಂಚಾಲಕ ಉಲ್ಲಾಸ ಕಲ್ಲೂರ ಮಾತನಾಡಿ, ಈಗಿರುವಂತ ವ್ಯವಸ್ಥೆಯಲ್ಲಿ ಸುಲಭ ಸಾರಿಗೆ ಸಂಚಾರವು ಸಾಧ್ಯವಿಲ್ಲದಾಗಿದ್ದು, ವಿದ್ಯಾರ್ಥಿಗಳಿಗೆ ಪ್ರತ್ಯೇಕ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಒತ್ತಾಯಿಸಿದರು. ಬಸ್ಸಿನಲ್ಲಾಗುತ್ತಿರುವ ಗದ್ದಲಗಳಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಸರಿಯಾದ ಸಮಯಕ್ಕೆ ಶಾಲಾ ಕಾಲೇಜನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗುತ್ತಿದ್ದು, ಕೂಡಲೆ ಸೂಕ್ತ ಕ್ರಮ ಕೈಗೊಳ್ಳುವದರೊಂದಿಗೆ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತಾಗಬೇಕೆಂದು ಆಗ್ರಹಿಸಿದರು. 

ಮಹಿಳೆಯರಿಗೆ ಶಕ್ತಿ ಯೋಜನೆಯಲ್ಲಿ ಉಚಿತ ಪ್ರಯಾಣ ಒದಗಿಸಿಕೊಡಲಾಗಿದ್ದು, ಅದರಲ್ಲಿ ವಿದ್ಯಾರ್ಥಿನಿಯರಿಗೂ ಅನುಕೂಲವಾಗಿದೆ. ಬರುವಂತ ದಿನಗಳಲ್ಲಿ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣದ ಯೋಜನೆಯ ಅನುಕೂಲತೆ ಒದಗಿಸಿಕೊಡಬೇಕೆಂದರು. ಕೂಡಲೆ ವಿದ್ಯಾರ್ಥಿಗಳ ಅನುಕೂಲತೆಗೆ ತಕ್ಕಂತೆ ಬಸ್ಸಿನ ವ್ಯವಸ್ಥೆ ಕಲ್ಪಿಸದೆ ಹೋದಲ್ಲಿ ಬರುವಂತ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದರು. ಸಮಸ್ಯೆಗಳ ಕುರಿತು ಮನವಿಯನ್ನು ಘಟಕ ವ್ಯವಸ್ಥಾಪಕರಿಗೆ ಸಲ್ಲಿಸಲಾಯಿತು. ಅಭಿ ಗ್ಯಾನಪ್ಪನವರ, ಸಾಗರ ಶ್ಯಾಮರಾಯನವರ, ಅಭಿ ಪವಾರ, ಪ್ರವೀಣ ಹೂಗಾರ, ವಿಶ್ವ ಮುನವಳ್ಳಿ, ಶ್ರೀರಾಮ ಜೋರಾಪುರ, ಮಧು ತಳವಾರ, ಅಶ್ವಿನಿ, ಪ್ರಭು ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ