ಅಥಣಿ ಶಾಸಕ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಪ್ರತಿಭಟನೆ
ಜಮಖಂಡಿ 28 : ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಜಮಖಂಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಎ.ಜಿ. ದೇಶಾಯಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸವದಿ ಅವರ ರಾಜಕೀಯ ಅನುಭವ ಹಾಗೂ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಒತ್ತಾಯಿಸಿದರು. ಕಳೆದ ಮೂರು ವರ್ಷಗಳಿಂದ ಅವರು ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟ್ರೇಡ್ ಯೂನಿಯನ್ ಮುಖಂಡ ತೌಫಿಕ್ ಪಾತರ್ಹಳ್ಳಿ ಮಾತನಾಡಿ, ಬಾಗಲಕೋಟೆ, ತಿಮ್ಮಾಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಸವದಿ ಅವರಿಗೆ ವ್ಯಾಪಕ ಜನಬೆಂಬಲ ಇದೆ. ಅವರಂತಹ ಅನುಭವಸಂಪನ್ನ ಹಾಗೂ ಜನಾನುರಾಗಿ ನಾಯಕರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿವಿಧ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.