ಧಾರವಾಡ - ಹುಬ್ಬಳ್ಳಿ

ಎಸ್‌ಐಆರ್ ವಿರೋಧಿ ಹೋರಾಟಗಾರರ ಬಂಧನ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ಎಸ್‌ಐಆರ್ ವಿರೋಧಿ ಹೋರಾಟಗಾರರ ಬಂಧನ ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ

ಲೋಕದರ್ಶನ ವರದಿ 


ಧಾರವಾಡ  11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದೇಶಾದ್ಯಂತ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ, ಎಐಡಿಎಸ್‌ಒ, ಎಐಡಿವೈಒ ಮತ್ತು ಎಐಕೆಕೆಎಂಎಸ್ ಸಂಘಟನೆಗಳ ನೇತೃತ್ವದಲ್ಲಿ ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.  

ಉಳಿದ ಇಬ್ಬರು ಚುನಾವಣಾ ಆಯುಕ್ತರ ಅಭಿಪ್ರಾಯಗಳನ್ನು ಕಡೆಗಣಿಸಿ, ಏಕಪಕ್ಷೀಯವಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಈ ಪ್ರಕ್ರಿಯೆಯನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.  

ದೇಶದಾದ್ಯಂತ ವಿದ್ಯಾರ್ಥಿಗಳು, ಯುವಜನರು ಮತ್ತು ಜನಸಾಮಾನ್ಯರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರ ಪೊಲೀಸ್ ಹಾಗೂ ಮಿಲಿಟರಿ ಬಲದ ಮೂಲಕ ಜನಾಂದೋಲನವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಮುಖಂಡರು ದೂರಿದರು. ಸಾವಿರಾರು ಹೋರಾಟಗಾರರು ಹಾಗೂ ವಿವಿಧ ಜನಪರ ಸಂಘಟನೆಗಳ ನಾಯಕರನ್ನು ಬಂಧಿಸುವ ಮೂಲಕ ಜನರ ಆಕ್ರೋಶವನ್ನು ತಡೆಯಲು ಸಾಧ್ಯವಿಲ್ಲ ಎಂದರು.  

ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸಿಂಧು ಕೌದಿ ಮಾತನಾಡಿ, ರಾಜ್ಯದಲ್ಲಿಯೂ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯನ್ನು ಪೊಲೀಸರು ಬಲಪ್ರಯೋಗದ ಮೂಲಕ ಹತ್ತಿಕ್ಕಿರುವುದನ್ನು ತೀವ್ರವಾಗಿ ಖಂಡಿಸಿದರು. ವಿದ್ಯಾರ್ಥಿ-ಯುವಜನರ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದ್ದು, ಸರ್ಕಾರ ಕೂಡಲೇ ಪ್ರತಿಭಟನಾಕಾರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.  

ಎಐಕೆಕೆಎಂಎಸ್ ಸಂಘಟನೆಯ ದೀಪಾ ಧಾರವಾಡ ಮಾತನಾಡಿ, ಭಗತ್ ಸಿಂಗ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಂತಹ ಹೋರಾಟಗಾರರು ಜನಿಸಿದ ನಾಡಿನಲ್ಲಿ ಜನರ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಎಸ್‌ಐಆರ್ ಪ್ರಕ್ರಿಯೆ ರದ್ದುಪಡಿಸುವುದು ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲರೂ ಬೆಂಬಲ ನೀಡಬೇಕು ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಸಾಧಿಕ್ ರೌಫ್ ಖಾನ್, ಉಮರ್ ಲಂಗೋಟಿ, ಶಾಂತೇಶ ನಂದಿಕೋಲ್ಮಠ, ಸಿದ್ದಲಿಂಗ ಚಿಪ್ಪಲಕಟ್ಟಿ, ಸೈಮುದ್ದೀನ್ ಮಗಳಾನಿ ಸೇರಿದಂತೆ ಹಲವರು ಭಾಗವಹಿಸಿದ್ದರು. 


ಸುದ್ದಿ ಓದಿ