ಎಲ್ಲಾ ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ಹಿಂಪಡೆಯಲ್ಲ: ಕೇಂದ್ರಕ್ಕೆ ರಾಕೇಶ್ ಟಿಕಾಯತ್ ಎಚ್ಚರಿಕೆ
ನವದೆಹಲಿ: ನ. 29 ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಇನ್ನಿತರ ಬೇಡಿಕೆಗಳ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯದ ಹೊರತು ನಾವು ಪ್ರತಿಭಟನಾ ಸ್ಥಳದಿಂದ ಮೇಲೇಳುವುದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈತರ ಪ್ರಮುಖ ಬೇಡಿಕೆಯಾದ ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಬಗ್ಗೆ ಸರ್ಕಾರ ಕಾನೂನು ತರಬೇಕು. ರೈತ ಹೋರಾಟದಲ್ಲಿ ಮೃತಪಟ್ಟ 750 ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವ ಕುರಿತು ಸರ್ಕಾರ ಅಧಿವೇಶನದಲ್ಲಿ ಚರ್ಚಿಸಬೇಕು. ಇವು ಇತ್ಯರ್ಥ ಕಾಣದ ಹೊರತು ನಾವು ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ತಿಳಿಸಿದರು.
ಮೊದಲು ರೈತರ ಎಲ್ಲಾ ಬೇಡಿಕೆಗಳನ್ನು ಶೀಘ್ರವಾಗಿ ಬಗೆಹರಿಸಬೇಕು. ಇಲ್ಲವಾದಲ್ಲಿ ರೈತ ಹೋರಾಟ ಹೀಗೆಯೇ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.