ಪೌರಕಾರ್ಮಿಕರಿಗೆ ಅಗತ್ಯ ಸೌಕರ್ಯ ಕಲ್ಪಿಸಿ:ಸಹಾಯಕ ಆಯುಕ್ತ ಸಿದ್ದರಾಮೇಶ್ವರ
ಹೊಸಪೇಟೆ(ವಿಜಯನಗರ) 08: ಹೊಸಪೇಟೆಯ ಸಹಾಯಕ ಆಯುಕ್ತರಾದ ಸಿದ್ದರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ಸಗಳ ಉದ್ಯೋಗ ನಿಷೇಧ ಮತ್ತು ಅವರ ಪುನರ್ವಸತಿ ಕಾಯಿದೆ 2013ಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಉಪವಿಭಾಗ ಮಟ್ಟದ ನಿಗಾ ಸಮಿತಿ ಸಭೆ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17ರಂತೆ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ನಡೆಯಿತು.
ಸಹಾಯಕ ಆಯುಕ್ತ ಸಿದ್ದಾರಾಮೇಶ್ವರ ಅವರು ಎಲ್ಲಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಸುತ್ತಿರುವ ಪೌರಕಾರ್ಮಿಕರಿಗೆ ನಿವೇಶನ, ಕನಿಷ್ಠ ವೇತನ, ಇ.ಎಸ್.ಐ, ಪಿ.ಎಫ್ ಹಾಗೂ ವಿಮಾಕಂತುಗಳ ಪಾವತಿ ಕುರಿತು ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮವಹಿಸಲು ಈ ಸಂದರ್ಭದಲ್ಲಿ ಸೂಚಿಸಿದರು.
ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಒಟ್ಟು 17 ಸಮುದಾಯ ಸ್ಯಾನಿಟರಿ ಶೌಚಾಲಯಗಳಲ್ಲಿ 15 ಕಾಮಗಾರಿಗಳು ಪೂರ್ಣಗೊಂಡಿದ್ದು, ಇನ್ನೂ 02 ಕಾಮಗಾರಿಗಳು ಪ್ರಗತಿಯಲ್ಲಿವೆ, ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 02 ಸಮುದಾಯ ಸ್ಯಾನಿಟರಿ ಲ್ಯಾಟ್ರಿನ್ಗಳ ಕಾಮಗಾರಿ ಪೂರ್ಣಗೊಂಡಿವೆ, ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 15 ಸಮುದಾಯ ಸ್ಯಾನಿಟರಿ ಲ್ಯಾಟ್ರಿನ್ಗಳ ಕಾಮಗಾರಿಗಳು ಪೂರ್ಣಗೊಂಡಿವೆ ಎಂಬ ಮಾಹಿತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ನಾಯ್ಕ್, ಅವರು ಸಭೆಗೆ ವಿವರಿಸಿದರು.
ಕಮಲಾಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ನಿವೇಶನ ಕಲ್ಪಿಸಲಾಗಿದ್ದು, ಹಗರಿಬೊಮ್ಮನಹಳ್ಳಿ ಪುರಸಭೆ ವ್ಯಾಪ್ತಿಯ ಒಟ್ಟು 24ಜನ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿದ್ದು, 19 ಜನರಿಗೆ ನೀವೇಶನ ಮಂಜೂರು ಮಾಡಲಾಗಿದೆ. ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿಯಲ್ಲಿ 4ಜನರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಕೂಡ್ಲಿಗಿ ಪಟ್ಟಣ ಪಂಚಾಯಿತಿಯ ಕಾಯಂ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ನೀಡಿದ್ದು, ಹೊಸಪೇಟೆ ನಗರಸಭೆ ವ್ಯಾಪ್ತಿಯ ನಿವೇಶನ ರಹಿತ ಪೌರಕಾರ್ಮಿಕರಿಗೆ ನಿವೇಶನ ನೀಡಲು ಕ್ರಮ ವಹಿಸಲಾಗುವುದು ಎಂದು ಸಂಬಂಧಿಸಿದ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಸಫಾಯಿ ಕರ್ಮಚಾರಿಗಳು ದ್ವಿಚಕ್ರ ವಾಹನ, ಐರಾವತ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದು, ನಿಯಮಾನುಸಾರ ಕ್ರಮವಹಿಸಲಾಗುವುದು ಎಂದು ಮರಿಯಮ್ಮನಹಳ್ಳಿಯ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಹೇಳಿದರು. ಹಾಗೆಯೇ ಪುರಸಭಾ ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ಮಾಸ್ಟರ್ ಹೆಲ್ತ್ ಚೆಕಪ್ ಹಾಗೂ ಸಾಮಾನ್ಯ ಆರೋಗ್ಯ ತಪಾಸಣೆ ಮಾಡಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪಾಲ್ಗೊಂಡಿದ್ದ ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳು ಹಗರಿಬೊಮ್ಮನಹಳ್ಳಿಯಲ್ಲಿ 13, ಕೂಡ್ಲಿಗಿ ತಾಲೂಕಿನಲ್ಲಿ 17 ಹಾಗೂ ಹೊಸಪೇಟೆ ತಾಲೂಕಿನಲ್ಲಿ 29 ಸಮುದಾಯ ಭವನಗಳ ಕಟ್ಟಡ ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಸಂಬಂಧಪಟ್ಟ ಸಮುದಾಯದವರಿಗೆ ಒಪ್ಪಿಸಲಾಗುವುದು ಎಂದು ತಿಳಿಸಿದರು.
ಕೂಡ್ಲಿಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೂಡ್ಲಿಗಿ ಪಟ್ಟಣ ಪಂಚಾಯಿತಿಯ ಅನುದಾನದ ಶೇ.22.75ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರು ವಾಸಿಸುತ್ತಿರುವ ಸ್ಲಂ ಏರಿಯಾಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಕೂಡ್ಲಿಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನಕ್ಕೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾದ 3 ಶೆಡ್ಗಳನ್ನು ತೆರವುಗೊಳಿಸಿ ರಸ್ತೆ ಸಂಪರ್ಕವನ್ನು ಕಲ್ಪಿಸಲಾಗಿದೆ ಎಂದು ಕೂಡ್ಲಿಗಿ ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ಅವರುಸಭೆಗೆ ತಿಳಿಸಿದರು.
ಹೊಸಪೇಟೆಯಲ್ಲಿ 02, ಕೂಡ್ಲಿಗಿಯಲ್ಲಿ 03 ಪ್ರಕರಣಗಳು ಪೊಲೀಸ್ ತನಿಖೆಯಲ್ಲಿದ್ದು, ಹೊಸಪೇಟೆಯಲ್ಲಿ 16, ಕೂಡ್ಲಿಗಿಯಲ್ಲಿ 42 ಪ್ರಕರಣಗಳು ಹಾಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಕೂಡ್ಲಿಗಿಯಲ್ಲಿ 04 ಪ್ರಕರಣಗಳು ನ್ಯಾಯಾಲಯದಲ್ಲಿ ಮುಕ್ತಾಯವಾಗಿವೆ. ಕೂಡ್ಲಿಗಿಯಲ್ಲಿ 01 ಪ್ರಕರಣವು ಅಂತಿಮ ವರದಿಗೆ ಬಂದಿರುತ್ತವೆ ಎಂಬ ಮಾಹಿತಿಯನ್ನು ಹೊಸಪೇಟೆಯ ಉಪಪೊಲೀಸ್ ವಿಭಾಗಾಧಿಕಾರಿಯಿಂದ ಸಂಗ್ರಹಿಸಿರುವುದಾಗಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಹೊಸಪೇಟೆ ಡಿ.ವೈ.ಎಸ್ಪಿ ವಿಶ್ವನಾಥರಾವ್ ಕುಲಕರ್ಣಿ, ಹೊಸಪೇಟೆ ತಹಶೀಲ್ದಾರ್ ವಿಶ್ವಜೀತ್ ಮೆಹತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ನಾಯ್ಕ್, ನಗರಸಭೆಯ ಅಧಿಕಾರಿಗಳು, ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.