ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯ ಸೌಲಭ್ಯ ಒದಗಿಸಿ

ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯ ಸೌಲಭ್ಯ ಒದಗಿಸಿ Provide the facility of Griha Bhagya Yojana to the civic workers

ಲೋಕದರ್ಶನ ವರದಿ 

 ಕಾರವಾರ 12 :- ಜಿಲ್ಲೆಯ ಎಲ್ಲಾ ನಗರಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ವ್ಯವಸ್ಥೆಯನ್ನು ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು ಹೇಳಿದರು. 

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಕಾರವಾರ ಇವರ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಮಿಕರು/ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಹಾಗೂ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ಪೌರಕಾರ್ಮಿಕರಿಗೆ ಮನೆಯನ್ನು ಒದಗಿಸುವುದು ಎಲ್ಲಾ ನಗರಸ್ಥಳಿಯ ಸಂಸ್ಥೆಗಳ ಪ್ರಮುಖ ಕರ್ತವ್ಯವಾಗಿದ್ದು, ಜಿಲ್ಲೆಯಲ್ಲಿ  ಗೃಹಭಾಗ್ಯ ಯೋಜನೆಯಡಿಯಲ್ಲಿ ಪೌರಕಾರ್ಮಿಕರಿಗೆ ಈಗಾಗಲೇ ನಿರ್ಮಾಣಗೊಂಡಿರುವ ಮನೆಗಳನ್ನು ತಕ್ಷಣವೇ ಹಸ್ತಾಂತರಿಸುವಂತೆ ಮತ್ತು ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ಶೀಘ್ರದಲ್ಲಿ ಕಾಮಗಾರಿ ಮುಕ್ತಾಯಗೊಳಿಸಿ ಹಂಚಿಕೆ ಮಾಡಬೇಕು. ಮನೆಗಳ ನಿರ್ಮಾಣದಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು.

ಇದರಲ್ಲಿ ನಿರ್ಲಕ್ಷ್ಯ ತೋರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರೆ​‍್ಡ ಮಾಡುವಂತೆ ಹಾಗೂ ಈಗಾಗಲೇ ನಿರ್ಮಿಸಿರುವ ಮನೆಗಳ ಸುರಕ್ಷತೆ ಮತ್ತು ಗುಣಮಟ್ಟ ಕುರಿತಂತೆ ಪ್ರತ್ಯೇಕ ತನಿಖೆ ನಡೆಸುವಂತೆ ತಿಳಿಸಿದ ಅವರು, ಪೌರಕಾರ್ಮಿಕರ ಮನೆ ನಿರ್ಮಾಣಕ್ಕೆ ಜಾಗದ ಕೊರತೆಯ ಸಮಸ್ಯೆಯ ನೆಪ ಹೇಳದೇ ಆದ್ಯತೆಯಲ್ಲಿ ಎಲ್ಲರಿಗೂ ಮನೆ ನಿರ್ಮಾಣ ಮಾಡಿಕೊಡುವಂತೆ ನಿರ್ದೇಶನ ನೀಡಿದರು. 

ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಬಳಕೆ ಮಾಡುವಂತೆ ಸೂಚಿಸಿದ ಅವರು, ಕಾರ್ಮಿಕರಿಗೆ ನಿಯಮಿತ ಆರೋಗ್ಯ ತಪಾಸಣೆ, ದೈನಂದಿನ ಉಪಹಾರ, ಸಂಕಷ್ಟ ಭತ್ಯೆ, ಸುರಕ್ಷತಾ ಉಪಕರಣಗಳನ್ನು ನೀಡಬೇಕು. ಸಕಾಲದಲ್ಲಿ ವೇತನ ಪಾವತಿಸಬೇಕು, ಸ್ಯಾಲರಿ ಸ್ಲಿಪ್ ನೀಡಬೇಕು, ಗುತ್ತಿಗೆ ಕಾರ್ಮಿಕರಿಗೆ ಇ.ಎಸ್‌.ಐ ಮತ್ತು ಪಿ.ಎಫ್ ಸೌಲಭ್ಯಗಳನ್ನು ಕಡ್ಡಾಯವಾಗಿ ನೀಡಬೇಕು ಇದರಲ್ಲಿ ವ್ಯತ್ಯಯ ಕಂಡುಬಂದಲ್ಲಿ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್‌ ಗೆ ಸೇರಿಸಿ ಎಂದರು.