ಮುಂಡಗೋಡದಲ್ಲಿ ಸಾರ್ವಜನಿಕ ಆರೋಗ್ಯ ಘಟಕ ಪ್ರಯೋಗಶಾಲೆ ಆರಂಭ
ಲೋಕದರ್ಶನ ವರದಿ
ಮುಂಡಗೋಡ 28 : ಪಟ್ಟಣದ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಘಟಕ ಪ್ರಯೋಗಶಾಲೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುಂಡಗೋಡ ಸರ್ಕಾರಿ ಆಸ್ಪತ್ರೆಗಳಿಗೆ ಹೈಟೆಕ್ ಪ್ರಯೋಗಾಲಯ ಸೌಲಭ್ಯಗಳ ಜೊತೆಗೆ ಕಣ್ಣಿನ ತಪಾಸಣೆ ಹಾಗೂ ರಕ್ತ ಪರೀಕ್ಷೆಗೆ ಅಗತ್ಯವಾದ ಆಧುನಿಕ ಯಂತ್ರೋಪಕರಣಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. “ನಾನು ಕೂಡ ಬಿಪಿ ಮತ್ತು ಶುಗರ್ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಯನ್ನೇ ನಂಬುತ್ತೇನೆ.
ಜನಪ್ರತಿನಿಧಿಗಳು ಭೇಟಿ ನೀಡಿದಾಗ ಆಸ್ಪತ್ರೆಗಳ ನಿರ್ವಹಣೆ ಮತ್ತಷ್ಟು ಸುಧಾರಿಸುತ್ತದೆ” ಎಂದು ಅಭಿಪ್ರಾಯಪಟ್ಟರು. ವೈದ್ಯ ವೃತ್ತಿ ಮಹತ್ವದ ಸೇವೆಯಾಗಿದ್ದು, ರೋಗಿಗಳೊಂದಿಗೆ ಸಹಾನುಭೂತಿಯಿಂದ ವರ್ತಿಸಿ ಗುಣಮಟ್ಟದ ಚಿಕಿತ್ಸೆ ನೀಡಬೇಕು ಎಂದು ವೈದ್ಯರು ಮತ್ತು ಸಿಬ್ಬಂದಿಗೆ ಸಲಹೆ ನೀಡಿದರು. ಈ ಕಾರ್ಯಕ್ರಮದಲ್ಲಿ ವೈದ್ಯರು, ಸಿಬ್ಬಂದಿ, ಸ್ಥಳೀಯ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ಶಿಸ್ತಿನೊಂದಿಗೆ 24/7 ಸೇವೆ ನೀಡುವಂತೆ ಇದೇ ಸಂದರ್ಭದಲ್ಲಿ ಅವರು ಸೂಚಿಸಿದರು.