ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಜನಜಾಗೃತಿ ಅಗತ್ಯ: ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್
ಲೋಕದರ್ಶನ ವರದಿ
ಮುಧೋಳ: ಅ. 10: ತಾಲೂಕಿನ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಜನಜಾಗೃತಿ ಜಾಥಾ, ಗಾಂಧಿ ಸ್ಮೃತಿ ಹಾಗೂ ಪದಗ್ರಹಣ ಸಮಾರಂಭ ಇತ್ತೀಚೆಗೆ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀಶೈಲಗೌಡ ಪಾಟೀಲ ಆಯ್ಕೆಯಾದರು.
ಜನಜಾಗೃತಿ ವೇದಿಕೆಯ ಅಧ್ಯಕ್ಷ ಶ್ರೀಕಾಂತ ಸಂದಿಮನಿ ಅವರು ನೂತನ ಅಧ್ಯಕ್ಷರಿಗೆ ಧ್ವಜ ಹಾಗೂ ಗ್ರಂಥಿಗಳನ್ನು ಸಮರ್ಿಸಿ ಗೌರವಿಸಿದರು. ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕಾರ್ಯಕ್ರಮದ ಮುಖ್ಯ ವೇದಿಕೆಯವರೆಗೆ ನಡೆದ ಜನಜಾಗೃತಿ ಜಾಥಾಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶ ಮಲಘಾಣ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಮಾತನಾಡಿ, ಯುವ ಸಮುದಾಯ ಮಾದಕ ವ್ಯಸನಗಳಿಗೆ ಬಲಿಯಾಗಿ ತಮ್ಮ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಸಮಾಜದಲ್ಲಿ ಮಾದಕ ವಸ್ತುಗಳ ಬೇಡಿಕೆ ಹೆಚ್ಚುತ್ತಿರುವುದು ಕಳವಳಕಾರಿ ಬೆಳವಣಿಗೆ. ಸಮುದಾಯವು ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿರಾಕರಿಸಿದಾಗ ಮಾತ್ರ ಸಮಾಜದ ಆರೋಗ್ಯವನ್ನು ಕಾಪಾಡಲು ಸಾಧ್ಯ. ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹೇಳಿದರು.