ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ತ್ವರಿತಗೊಳಿಸಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೂಚನೆ
ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ತ್ವರಿತಗೊಳಿಸಲು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸೂಚನೆ
ಬೆಳಗಾವಿ, ಸೆ. 12: ಬೆಳಗಾವಿ ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಕೈಗೊಳ್ಳಲಾಗುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳ ಪ್ರಗತಿಯನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಶನಿವಾರ ಪರೀಶೀಲಿಸಿದರು.
ನಗರದ ವಿವಿಧ ಪ್ರಮುಖ ರಸ್ತೆಗಳು ಹಾಗೂ ಬಡಾವಣೆಗಳಿಗೆ ಭೇಟಿ ನೀಡಿದ ಅವರು, ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಪರೀಶೀಲಿಸಿದರು. ಮಳೆಯಿಂದಾಗಿ ರಸ್ತೆ ಹದಗೆಟ್ಟಿರುವ ಪ್ರದೇಶಗಳಲ್ಲಿ ದುರಸ್ತಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಂಡು, ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಹ್ಯಾದ್ರಿ ನಗರ ಹಾಗೂ ಕುವೆಂಪು ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯುತ್ತಿರುವ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳನ್ನು ಪರೀಶೀಲಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ, ಕಾಮಗಾರಿಯ ಗುಣಮಟ್ಟದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ರಸ್ತೆ ದುರಸ್ತಿ ಕಾರ್ಯದಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸಬೇಕು ಹಾಗೂ ಕೈಗೊಂಡಿರುವ ಕಾಮಗಾರಿಗಳು ದೀರ್ಘಕಾಲ ಬಾಳಿಕೆ ಬರುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ರಾಮನಗರ, ಜ್ಯೋತಿ ನಗರ, ಜಯನಗರ, ಮುಸ್ತಫಾ ಕಾಲೋನಿ, ಶಾಹುನಗರ ಬಸ್ ನಿಲ್ದಾಣ ಹಾಗೂ ಕಲ್ಮೇಶ್ವರ ನಗರ ಪ್ರದೇಶಗಳಲ್ಲಿಯೂ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗಳ ಪ್ರಗತಿಯನ್ನು ಪರೀಶೀಲಿಸಲಾಯಿತು.
ಜನರು ಪ್ರತಿನಿತ್ಯ ಸಂಚರಿಸುವ ಪ್ರಮುಖ ರಸ್ತೆಗಳು ಹಾಗೂ ವಸತಿ ಪ್ರದೇಶಗಳ ರಸ್ತೆಗಳಲ್ಲಿ ಗುಂಡಿಗಳಿಂದ ವಾಹನ ಸವಾರರಿಗೆ ತೊಂದರೆಯಾಗದಂತೆ ಆದ್ಯತೆಯ ಮೇರೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಯಾವುದೇ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಶಾಸಕಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಪ್ರಮುಖ ರಸ್ತೆಗಳು, ಬಡಾವಣೆಗಳ ಸಂಪರ್ಕ ರಸ್ತೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಳಸುವ ಮಾರ್ಗಗಳ ನಿರ್ವಹಣೆಗೆ ವಿಶೇಷ ಗಮನ ಹರಿಸುವಂತೆ ತಿಳಿಸಿದ ಅವರು, ಕಾಮಗಾರಿ ಪೂರ್ಣಗೊಂಡ ನಂತರವೂ ರಸ್ತೆ ಗುಣಮಟ್ಟವನ್ನು ಪರೀಶೀಲಿಸಿ, ಅಗತ್ಯವಿದ್ದಲ್ಲಿ ದುರಸ್ತಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜನರ ಸುಗಮ ಸಂಚಾರ, ರಸ್ತೆ ಸುರಕ್ಷತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ., ವಾರ್ಡ್ ನಂ. 31ರ ನಗರ ಸೇವಕಿ ವೀಣಾ ವಿಜಾಪುರ, ಮಹಾನಗರ ಪಾಲಿಕೆಯ ಸಹಾಯಕ ಅಭಿಯಂತರ ಜಗದೀಶ ಎಸ್., ಕಿರಿಯ ಅಭಿಯಂತರ ಅಕ್ಷತಾ ಸೇರಿದಂತೆ ಪಾಲಿಕೆ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.