ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಸೇವೆಗೆ ದೊರೆತ ಮನ್ನಣೆ ಹಿ ಮಲ್ಲಿಕಾರ್ಜುನ ಪಾಟೀಲ
ಚಿಕ್ಕೋಡಿ 17 : ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿರುವ ಪ್ರಕಾಶ ಹುಕ್ಕೇರಿ ಅವರು ಅನೇಕ ಕಾರ್ಯಕರ್ತರಿಗೆ ರಾಜಕೀಯ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ತಮ್ಮ ರಾಜಕೀಯ ಜೀವನದಲ್ಲಿ ವಿವಿಧ ಮಹತ್ವದ ಹುದ್ದೆಗಳನ್ನು ನಿರ್ವಹಿಸುವುದರ ಜೊತೆಗೆ ಪಕ್ಷದ ಕಾರ್ಯಕರ್ತರನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ ನೂತನ ಸದಸ್ಯರಾಗಿ ನೇಮಕಗೊಂಡಿರುವ ಮಲ್ಲಿಕಾರ್ಜುನ ಪಾಟೀಲ ಹೇಳಿದರು.
ಇತ್ತಿಚ್ಚೆಗೆ ರಾಜ್ಯ ಸರ್ಕಾರ ನಿಗಮ ಮಂಡಳಿ ಸದಸ್ಯರಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಗಣೇಶ ಹುಕ್ಕೇರಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು. ಪ್ರಕಾಶ ಹುಕ್ಕೇರಿ ಅವರು ಯಕ್ಸಂಬಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ತಮ್ಮ ಸಾರ್ವಜನಿಕ ಜೀವನ ಆರಂಭಿಸಿ, ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರದಲ್ಲಿ ಸಣ್ಣ ಕೈಗಾರಿಕೆ, ಮುಜರಾಯಿ ಹಾಗೂ ಸಕ್ಕರೆ ಸಚಿವರಾಗಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಕಾರ್ಯನಿರ್ವಹಿಸಿದ್ದಾರೆ.
ಪ್ರಸ್ತುತ ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಅವರ ದೀರ್ಘಕಾಲದ ರಾಜಕೀಯ ಅನುಭವ ಮತ್ತು ಜನಸೇವೆಯ ಬದ್ಧತೆ ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣೆಯಾಗಿದೆ ಎಂದರು. ಕಳೆದ 20ರಿಂದ 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಂಘಟನೆಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ನನಗೆ ಹೊಸ ಜವಾಬ್ದಾರಿ ಸಿಕ್ಕಿದೆ. ಶಾಸಕ ಗಣೇಶ ಹುಕ್ಕೇರಿ ಅವರ ಪ್ರಯತ್ನ ಮತ್ತು ಮಾರ್ಗದರ್ಶನದಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಅವಕಾಶಗಳು ದೊರೆತಿರುವುದು ಸಂತಸದ ಸಂಗತಿಯಾಗಿದೆ.
ಪಕ್ಷಕ್ಕಾಗಿ ದುಡಿದವರ ಸೇವೆಯನ್ನು ಗುರುತಿಸಿ ಅವರಿಗೆ ಜವಾಬ್ದಾರಿ ನೀಡುವುದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ಮೂಡಿಸುತ್ತದೆ. ಈ ನೇಮಕಾತಿಗಳು ಹಲವು ವರ್ಷಗಳ ಪರಿಶ್ರಮ ಮತ್ತು ಪಕ್ಷನಿಷ್ಠೆಗೆ ದೊರೆತ ಗೌರವವಾಗಿದೆ ಎಂದು ಮಲ್ಲಿಕಾರ್ಜುನ ಪಾಟೀಲ ತಿಳಿಸಿದರು. ಈ ಸಂದರ್ಭದಲ್ಲಿ ಕೇರೂರ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮಲ್ಲಿಕಾರ್ಜುನ ಪಾಟೀಲ ಅಭಿಮಾನಿಗಳು ಇದ್ದರು.