ವಿಜಯಪುರ

18 ಪರೀಕ್ಷಾ ಕೇಂದ್ರಗಳಲ್ಲಿ ಭೂ ಮಾಪಕರ ಹುದ್ದೆ ನೇಮಕಾತಿ ಪರೀಕ್ಷೆ

18 ಪರೀಕ್ಷಾ ಕೇಂದ್ರಗಳಲ್ಲಿ ಭೂ ಮಾಪಕರ ಹುದ್ದೆ ನೇಮಕಾತಿ ಪರೀಕ್ಷೆ


ವಿಜಯಪುರ, ಅ.2: ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಭೂ ಮಾಪಕರ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಯಿತು. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಪ್ರಕ್ರಿಯೆಯನ್ನು ಪರೀಶೀಲಿಸಿದರು.  

ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಜಿಲ್ಲಾಧಿಕಾರಿಗಳು ಸಿಕ್ಯಾಬ್ ಬಾಲಕಿಯರ ಪದವಿಪೂರ್ವ ಕಾಲೇಜು, ಪಿಡಿಜೆ ಕಾಲೇಜು ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು.  

ಈ ವೇಳೆ ಪರೀಕ್ಷಾ ಕೊಠಡಿಗಳ ವ್ಯವಸ್ಥೆ, ಅಭ್ಯರ್ಥಿಗಳಿಗೆ ಕಲ್ಪಿಸಿರುವ ಮೂಲಸೌಕರ್ಯ, ಭದ್ರತಾ ಕ್ರಮಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ಕೈಗೊಂಡಿರುವ ಸಿದ್ಧತೆಗಳನ್ನು ಪರೀಶೀಲಿಸಿದರು.  

ಪರೀಕ್ಷಾ ಕೇಂದ್ರಗಳಲ್ಲಿನ ವ್ಯವಸ್ಥೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ, ಲೋಪ ಅಥವಾ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಶಾಂತಿಯುತವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.  


ಸುದ್ದಿ ಓದಿ