ಕಾರವಾರ 10 : ವೈದ್ಯಕೀಯ ವಿಜ್ಞಾನ ಸಂಸ್ಥೆ (ಕ್ರಿಮ್ಸ್)ನಿಂದ ಡಾ. ಶಿವಾನಂದ ಕುಡ್ತರಕರ ಅವರನ್ನುಬಿಡುಗಡೆ ಮಾಡಿ , ಮಾತೃ ಇಲಾಖೆಗೆ ಕಳುಹಿಸಬೇಕು ಎಂದು ಜಿಲ್ಲಾ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ರಾಘು ನಾಯ್ಕ , ಹೆಲ್ತ್ ಕಮಿಷನರ್ ಗೆ ಹಾಗೂ ಕಾರವಾರ ಕ್ರಿಮ್ಸ್ ನಿರ್ದೇಶಕರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.
ವೈದ್ಯಕೀಯ ಶಿಕ್ಷಣ ಇಲಾಖೆಯ ಮೆಡಿಕಲ್ ಕಾಲೇಜುಗಳಲ್ಲಿ ಕಳೆದ 5 ವರ್ಷ ಅಥವಾ ಅದಕ್ಕಿಂತಲೂ ಹೆಚ್ಚು ವರ್ಷಗಳಿಂದ ಕೆಲಸ ಮಾಡುತ್ತಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳನ್ನು ಕೂಡಲೇ ಬಿಡುಗಡೆಗೊಳಿಸಿ ಮಾತೃ ಇಲಾಖೆಗೆ ಮರಳಿಸುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಕಳೆದ 10 ವರ್ಷಗಳಿಂದ ಕಾರವಾರದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಡಾ. ಶಿವಾನಂದ ಕುಡ್ತರಕರ ಕೆಲಸ ಮಾಡುತ್ತ ಹೆರಿಗೆಗೆ ಬರುವ ಬಡ ಮಹಿಳೆಯರಿಂದ ಹಣ ಪಡೆಯುತ್ತಿದ್ದಾರೆ ಎಂದು ಕಮಿಷನರ್ ಗೆ ನೀಡಿದ ಮನವಿಯಲ್ಲಿ ಆರೋಪಿಸಿದ್ದಾರೆ.
ಆಡಳಿತದಲ್ಲಿ ಭ್ರಷ್ಟಾಚಾರ ನಡೆಸುತ್ತಿರುವ ಹಾಗೂ ಅಧೀನ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಆರೋಪಗಳಿವೆ ಎಂದು ಮನವಿಲ್ಲಿ ಪ್ರಸ್ತಾಪಿಸಿದ್ದಾರೆ. ಕೂಡಲೇ ಡಾ. ಶಿವಾನಂದ ಅವರನ್ನು ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ಬಿಡುಗಡೆ ಮಾಡಬೇಕು. ಇಲ್ಲದ ಪಕ್ಷದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.