ಮಹಲಿಂಗಪುರ

ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ನಿವಾಸಿಗಳ ಆಗ್ರಹ

ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ನಿವಾಸಿಗಳ ಆಗ್ರಹ

ಲೋಕದರ್ಶನ ವರದಿ  

ಮಹಾಲಿಂಗಪುರ 30: ನಗರದ ವಿದ್ಯಾನಗರ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇತ್ತೀಚೆಗೆ ಇಬ್ಬರು ಯುವಕರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿರುವ ಘಟನೆ ನಡೆದಿದೆ.  

ವಿದ್ಯಾನಗರ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ರಸ್ತೆಗಳಲ್ಲಿ ಗುಂಪು ಗುಂಪಾಗಿ ಸಂಚರಿಸುವ ಬೀದಿ ನಾಯಿಗಳಿಂದ ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು ಹಾಗೂ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದ್ದಾರೆ.  

ಇತ್ತೀಚೆಗೆ ಇಬ್ಬರು ಯುವಕರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿರುವುದರಿಂದ ಸ್ಥಳೀಯರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿಂದೆಯೂ ಇದೇ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಕುರಿತು ಸಾರ್ವಜನಿಕರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.  

ವಿಶೇಷವಾಗಿ ಬೆಳಗ್ಗೆ ಹಾಗೂ ಸಂಜೆ ವೇಳೆ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ರಸ್ತೆಗಳಲ್ಲಿ ಸಂಚರಿಸಲು ಆತಂಕಪಡುವಂತಾಗಿದೆ. ಇನ್ನಷ್ಟು ಜನರ ಮೇಲೆ ದಾಳಿ ನಡೆಯುವ ಮುನ್ನ ಪುರಸಭೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ವಿದ್ಯಾನಗರದ ನಿವಾಸಿಗಳು ಒತ್ತಾಯಿಸಿದ್ದಾರೆ.  

ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬುದು ಸ್ಥಳೀಯರ ಪ್ರಮುಖ ಆಗ್ರಹವಾಗಿದೆ. 


ಸುದ್ದಿ ಓದಿ