ಹಿರಿಯರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ನ್ಯಾಯಾಧೀಶ ಹೊಸಮನೆ
ಲೋಕದರ್ಶನ ವರದಿ
ಬಳ್ಳಾರಿ, ಸೆ.25: ಹಿರಿಯರನ್ನು ಗೌರವದಿಂದ ಕಾಣುವುದು ಪ್ರತಿಯೊಬ್ಬರ ಕರ್ತವ್ಯ. ಹಿರಿಯರೊಂದಿಗೆ ಪ್ರೀತಿ, ಗೌರವದಿಂದ ನಡೆದುಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ ಹೇಳಿದರು.
ನಗರದ ಬಿಎಂಸಿಆರಿ್ಸ ಮೈದಾನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗುರುವಾರ ಆಯೋಜಿಸಿದ್ದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿನಗಳಲ್ಲಿ ಹಿರಿಯರು ಮಾನಸಿಕ ಹಿಂಸೆಗೆ ಒಳಗಾಗುತ್ತಿರುವುದು ಕಳವಳಕಾರಿ. ಈ ಹಿನ್ನೆಲೆಯಲ್ಲಿ ಕಿರಿಯರು ಹಿರಿಯರಿಗೆ ಸೂಕ್ತ ಗೌರವ ನೀಡುವ ಮೂಲಕ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಪೋಷಕರ ಪ್ರೀತಿ ಮತ್ತು ತ್ಯಾಗವನ್ನು ಅರ್ಥೈಸಿಕೊಂಡು ಅವರನ್ನು ಉತ್ತಮವಾಗಿ ಆರೈಕೆ ಮಾಡಿದಾಗ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯರಿಗೆ ಯಾವುದೇ ಸಮಸ್ಯೆ ಎದುರಾದರೂ ಕಾನೂನು ನೆರವು ನೀಡಲು ಇಲಾಖೆ ಸಿದ್ಧವಿದೆ.
ಹಿರಿಯರ ಹಕ್ಕುಗಳ ರಕ್ಷಣೆಗೆ ಕಾನೂನಿನ ಚೌಕಟ್ಟಿನಲ್ಲಿ ಅಗತ್ಯ ನ್ಯಾಯ ಒದಗಿಸಲಾಗುವುದು ಎಂದರು. ಹಿರಿಯರ ಅನುಭವಗಳು ಯುವ ಪೀಳಿಗೆಗೆ ಮಾರ್ಗದರ್ಶಿಯಾಗಿದ್ದು, ಅವರನ್ನು ಪ್ರೀತಿ ಮತ್ತು ಗೌರವದಿಂದ ನೋಡಿಕೊಳ್ಳಬೇಕು ಎಂದು ಹೇಳಿದರು.