ಅಗತ್ಯ ವಸ್ತುಗಳ ಬೆಲೆ ಏರಿಕೆ ; ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಆಕ್ರೋಶ
ಬಳ್ಳಾರಿ 20 : ರಾಜ್ಯದ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ, ಹಾಲಿನ ದರ ಸೇರಿದಂತೆ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆಗಳನ್ನು ಏಕಾಏಕಿ ಹೆಚ್ಚಿಸುವ ಮೂಲಕ ಜನಸಾಮಾನ್ಯರು ಹಾಗೂ ಮಧ್ಯಮ ವರ್ಗದವರ ಬದುಕಿಗೆ ಹೊರೆಯಾಗುತ್ತಿದೆ ಎಂದು ಮಾಜಿ ಶಾಸಕ ಗಾಳಿ ಸೋಮಶೇಖರ್ ರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ನಗರದ ರಾಯಲ್ ಸರ್ಕಲ್ನಲ್ಲಿ ಭಾರತೀಯ ಜನತಾ ಪಕ್ಷ ಬಳ್ಳಾರಿ ನಗರ ಮಂಡಲದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ಆಡಳಿತ ವೈಫಲ್ಯಗಳನ್ನು ಖಂಡಿಸಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ವೈಫಲ್ಯ ಕಂಡಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು.
ಬಸ್ ಪ್ರಯಾಣ ದರ, ಹಾಲಿನ ದರ ಹಾಗೂ ದಿನಬಳಕೆಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈಗಾಗಲೇ ದಿನನಿತ್ಯದ ಖರ್ಚುಗಳನ್ನು ನಿಭಾಯಿಸಲು ಕಷ್ಟಪಡುತ್ತಿರುವ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಬೆಲೆ ಏರಿಕೆ ಮತ್ತಷ್ಟು ಹೊರೆಯಾಗಿದೆ.
ಸರ್ಕಾರದ ಇಂತಹ ನಿರ್ಧಾರಗಳಿಂದ ಸಾಮಾನ್ಯ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು .ಪ್ರತಿಭಟನೆಯಲ್ಲಿ ಬಿಜೆಪಿ ಬಳ್ಳಾರಿ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ನಾಯ್ಡು ಮೋಕಾ, ಬಳ್ಳಾರಿ ನಗರ ಮಂಡಲದ ಅಧ್ಯಕ್ಷ ಗುರಂ ವೆಂಕಟರಮಣ,
ಮಹಾನಗರ ಪಾಲಿಕೆ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕ ಶ್ರೀನಿವಾಸ್ ಮೋತ್ಕಾರ್, ಐನಾತ್ ರೆಡ್ಡಿ, ಹನುಮಂತಪ್ಪ ಸೇರಿದಂತೆ ಪಾಲಿಕೆ ಸದಸ್ಯರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು.