ರೂಪನಗುಡಿ ಜಿ.ಪಂ ; ಹಿರಿಯ ನಾಯಕ ಜಯಣ್ಣಗೆ ಟಿಕೆಟ್ ನೀಡಿ, ಕಾರ್ಯಕರ್ತರ ಒತ್ತಾಯ ಕಾಂಗ್ರೆಸ್ನ ನಿಷ್ಠಾವಂತ ಹಿರಿಯ ಮುಖಂಡನಿಗೆ ಅವಕಾಶ ಕೊಡಿ
ಬಳ್ಳಾರಿ 14: ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಾಜಕೀಯ ಚಟುವಟಿಕೆಗಳು ಚುರುಕುಗೊಳ್ಳುತ್ತಿರುವ ಬೆನ್ನಲ್ಲೇ, ಬಳ್ಳಾರಿ ಗ್ರಾಮಾಂತರ ವ್ಯಾಪ್ತಿಯ ರೂಪನಗುಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ಮುಖಂಡ ರೂಪನಗುಡಿ ಜಯಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ . ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಉಪನಗುಡಿ ಕ್ಷೇತ್ರದ ಮತದಾರರು, ಜಯಣ್ಣ 1979ರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನದಿಂದ ಹಿಡಿದು ತಾಲೂಕು ಪಂಚಾಯಿತಿ ಉಪಾಧ್ಯಕ್ಷ, ಪ್ರಾಥಮಿಕ ಭೂ ಅಭಿವೃದ್ಧಿ ಬ್ಯಾಂಕ್ (ಪಿಎಲ್ಡಿ) ನಿರ್ದೇಶಕ ಹಾಗೂ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ (ಕಾಡಾ) ನಿರ್ದೇಶಕರಾಗಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ.ತಳಮಟ್ಟದಿಂದ ಬೆಳೆದ ನಾಯಕ1979ರಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಪ್ರವೇಶಿಸಿದ ಜಯಣ್ಣ ಅವರು, 1980ರಲ್ಲಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಸಹಕಾರಿ, ನೀರಾವರಿ ಕ್ಷೇತ್ರದಲ್ಲಿ ಸೇವೆಪಿಎಲ್ಡಿ ಬ್ಯಾಂಕ್ ನಿರ್ದೇಶಕರಾಗಿ ಸತತ ಮೂರು ಅವಧಿಗೆ ಕಾರ್ಯನಿರ್ವಹಿಸಿರುವ ಜಯಣ್ಣ ಅವರು, ರೈತರಿಗೆ ಕೃಷಿ ಸಾಲ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಆರ್ಥಿಕ ನೆರವು ದೊರೆಯುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಕಾಡಾ ನಿರ್ದೇಶಕರಾಗಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಮಸ್ಯೆಗಳು ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ.ಪಕ್ಷನಿಷ್ಠೆಗೆ ಮನ್ನಣೆ ನೀಡಲು ಆಗ್ರಹರಾಜಕೀಯದಲ್ಲಿ ಹಲವು ಏಳುಬೀಳುಗಳ ನಡುವೆಯೂ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಜಯಣ್ಣ ಅವರು, ವಿವಿಧ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಕಾರ್ಯನಿರ್ವಹಿಸಿದ್ದು, ಸಂಘಟನೆಯ ಬಲವರ್ಧನೆಗೆ ಶ್ರಮಿಸಿದ್ದಾರೆ ಎಂಬುದು ಅವರ ಬೆಂಬಲಿಗರ ಅಭಿಪ್ರಾಯವಾಗಿದೆ. ಕಳೆದ ಬಾರಿಯ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಟಿಕೆಟ್ ಫೈನಲ್ ಆಗಿದ್ದ ಸಂದರ್ಭದಲ್ಲಿ ಅಲ್ಲಂ ವೀರಭದ್ರ್ಪ ಅವರ ಅಲ್ಲಮ ಪ್ರಶಾಂತ್ ಗೆ ಕ್ಷೇತ್ರವನ್ನು ಬಿಟ್ಟುಕೊಟ್ಟು ಮುತ್ಸದ್ದಿತನವನ್ನು ಮೆರೆದಿದ್ದರು ರೂಪನಗುಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಹಾಗೂ ಸ್ಥಳೀಯ ಜನರೊಂದಿಗೆ ಹೊಂದಿರುವ ಸಂಪರ್ಕವನ್ನು ಪರಿಗಣಿಸಿ, ಈ ಬಾರಿ ಅವರಿಗೆ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.ನಾಲ್ಕೂವರೆ ದಶಕಗಳ ರಾಜಕೀಯ ಅನುಭವ ಹೊಂದಿರುವ ಜಯಣ್ಣ ಅವರಿಗೆ ಕಾಂಗ್ರೆಸ್ ಪಕ್ಷ ಅವಕಾಶ ನೀಡಲಿದೆಯೇ ಎಂಬುದು ಇದೀಗ ಕ್ಷೇತ್ರದ ರಾಜಕೀಯ ವಲಯದಲ್ಲಿ ಚರ್ಚೆಯ ವಿಷಯವಾಗಿದೆ. ಅಂತಿಮವಾಗಿ ಅಭ್ಯರ್ಥಿ ಆಯ್ಕೆ ಕುರಿತು ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರದತ್ತ ಕಾರ್ಯಕರ್ತರು ಹಾಗೂ ಬೆಂಬಲಿಗರು ಎದುರು ನೋಡುತ್ತಿದ್ದಾರೆ.