ಬೈಲಹೊಂಗಲದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಕಾಮಗಾರಿ ಪರಿಶೀಲಿಸಿದ ಗ್ರಾಮೀಣಾಭಿವೃದ್ಧಿ ಆಯುಕ್ತ ವೈ.ಎಸ್. ಪಾಟೀಲ
ಬೆಳಗಾವಿ, ಅ.31: ಗ್ರಾಮೀಣಾಭಿವೃದ್ಧಿ ಆಯುಕ್ತ ವೈ.ಎಸ್. ಪಾಟೀಲ ಅವರು ಶನಿವಾರ ಬೈಲಹೊಂಗಲ ತಾಲೂಕಿನ ಸಂಪಗಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಪ್ರಗತಿಯಲ್ಲಿರುವ ತಿರುಗಾಲುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಲಿಕಾರರೊಂದಿಗೆ ಸಂವಾದ ನಡೆಸಿದ ಆಯುಕ್ತರು, ಅವರ ಕುಂದುಕೊರತೆಗಳನ್ನು ಆಲಿಸಿದರು. ಕೂಲಿಕಾರರ ಎನ್ಎಂಎಂಎಸ್ (NMMS) ಹಾಜರಾತಿ ಹಾಗೂ ಗ್ರಾಮೀಣ ಉದ್ಯೋಗ ಖಾತರಿ ಜಾಬ್ ಕಾರ್ಡ್ಗಳನ್ನು ಪರಿಶೀಲಿಸಿ, ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದರು.
ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ:
ನಂತರ ಸಂಪಗಾವ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಅವರು, ವಿಬಿ-ಜಿ ರಾಮ್ ಜಿ ಯೋಜನೆಯಡಿ ನಿರ್ವಹಿಸಲಾಗುತ್ತಿರುವ 1ರಿಂದ 7ರವರೆಗಿನ ರಿಜಿಸ್ಟರ್ಗಳು ಹಾಗೂ ಕಾಮಗಾರಿಗಳಿಗೆ ಸಂಬಂಧಿಸಿದ ಕಡತಗಳನ್ನು ಪರಿಶೀಲಿಸಿದರು.
ಕಾಮಗಾರಿಗಳ ಅಳತೆ ಪುಸ್ತಕ, ಸಾಮಗ್ರಿಗಳ ಪಾವತಿ ಹಾಗೂ ಕೂಲಿಕಾರರ ವೇತನ ಪಾವತಿ ಪ್ರಕ್ರಿಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಯೋಜನೆಯ ಅನುಷ್ಠಾನದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ವಿವಿಧ ಸೂಚನೆ ಮತ್ತು ನಿರ್ದೇಶನಗಳನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂಜೀವ ಜುನ್ನೂರ, ಸಹಾಯಕ ನಿರ್ದೇಶಕ (ಗ್ರಾಉ) ರಾಜೇಂದ್ರ ಮೊರಬದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಆನಿಗೋಳ, ತಾಂತ್ರಿಕ ಸಂಯೋಜಕ ನಾಗರಾಜ ಯರಗುದ್ರಿ, ಐಇಸಿ ಸಂಯೋಜಕ ಶಿವಮೂರ್ತಯ್ಯ ಹಿರೇಮಠ, ತಾಂತ್ರಿಕ ಸಹಾಯಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಕೂಲಿಕಾರರು ಉಪಸ್ಥಿತರಿದ್ದರು.