ಮನರಂಜನೆ

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ವಿಧಿವಶ

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ವಿಧಿವಶ

ಬೆಂಗಳೂರು, ಜೂನ್ 15:ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ (38) ಇನ್ನಿಲ್ಲ ಎಂದು ಬೆಳಗಿನ ಜಾವ 3.34 ರ ಸುಮಾರಿಗೆ ವೈದ್ಯರು ಅಧಿಕೃತವಾಗಿ ಘೋಷಿಸಿದರು.ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ಮುನ್ನ ಆಸ್ಪತ್ರೆಯ ಸಿಬ್ಬಂದಿ ಅಂತಿಮ ಗೌರವ ಸಲ್ಲಿಸಿದರು.ಸರ್ಕಾರದ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಬೆಳಗ್ಗೆ 8 ರಿಂದ 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನಲ್ಲಿ  ಅಂತಿಮ ವಿಧಿವಿಧಾನ ನೆರವೇರಲಿದೆ.

ಸಾವಿನಲ್ಲೂ ಸಾರ್ಥಕತೆ:-ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯಗೊಂಡ ಕಾರಣ, ಅವರ ದೇಹದ ಅಂಗಾಂಗ ದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದರು.  ಎರಡು ಕಿಡ್ನಿ, ಒಂದು ಲಿವರ್, ಹೃದಯದ ಕವಾಟ, ಎರಡು ಕಣ್ಣುಗಳನ್ನು ವಿಜಯ್ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಅಂಗಾಂಗಗಳನ್ನು 7 ಜನರಿಗೆ ಕಸಿ ಮಾಡಲಾಗಿದೆ.   

-ಅಪಘಾತವಾಗಿದ್ದು ಹೇಗೆ:- ಶನಿವಾರ ರಾತ್ರಿ ಗೆಳೆಯ ನವೀನ್ ಜೊತೆಗೆ ಬೈಕ್ ನಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದಂತ ಸಂದರ್ಭದಲ್ಲಿ ನಟ ಸಂಚಾರಿ ವಿಜಯ್ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಅಪಘಾತಗೊಂಡಿದ್ದರು. ತಲೆಯ ಎಡಭಾಗಕ್ಕೆ ತೀವ್ರವಾಗಿ ಪೆಟ್ಟುಬಿದ್ದು, ರಕ್ತಸ್ರಾವ ಕೂಡ ಆಗಿತ್ತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ, ಶಸ್ತ್ರ ಚಿಕಿತ್ಸೆ ಮೂಲಕ ರಕ್ತಸ್ರಾವವನ್ನು ಸರಿ ಮಾಡಲಾಗಿತ್ತು. ಐಸಿಯುನಲ್ಲಿ ಇಂದು ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ, ಬ್ರೈನ್ ಸ್ಟ್ರೋಕ್ ಉಂಟಾಗಿ, ಅವರು ಮತ್ತಷ್ಟು ಗಂಭೀರ ಸ್ಥಿತಿಗೆ ತಲುಪಿದ್ದರು. ವೈದ್ಯರ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂಬುದಾಗಿಯೂ ಅಪೋಲೋ ಆಸ್ಪತ್ರೆಯ ವೈದ್ಯ ಡಾ.ಅರುಣ್ ನಾಯ್ಕ್ ಮಾಹಿತಿ ನೀಡಿದ್ದರು. 



ಸುದ್ದಿ ಓದಿ