ಹಾವೇರಿ

ಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಹಾಲು, ಬಸ್ ಪ್ರಯಾಣ ದರ ಏರಿಕೆ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ



           ಹಾವೇರಿ 08 :  ಹಾಲಿನ ದರ ಹಾಗೂ ಬಸ್ ಪ್ರಯಾಣ ದರವನ್ನು ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಆರ್ಥಿಕ ಬರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಕ್ರಮವನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಮತ್ತು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಹಾವೇರಿ ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ  ಭಾನುವಾರ ನಗರದ ಮೈಲಾರ ಮಹದೇವಪ್ಪ ಪ್ರತಿಮೆ ಎದುರು ಪ್ರತಿಭಟನೆ ನಡೆಯಿತು.

        ಹಾಲಿನ ದರ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬಸ್ ಪ್ರಯಾಣ ದರ ಹೆಚ್ಚಿಸಿರುವುದನ್ನು ತೀವ್ರವಾಗಿ ಖಂಡಿಸಿದ ಪ್ರತಿಭಟನಾಕಾರರು, ತಕ್ಷಣವೇ ಈ ಬೆಲೆ ಏರಿಕೆಯನ್ನು ವಾಪಸ್ ಪಡೆಯಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಘೋಷಣೆ ಕೂಗಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಡಿವೈಎಫ್‌ಐ ರಾಷ್ಟ್ರೀಯ ಮುಖಂಡರಾದ ಬಸವರಾಜ ಪೂಜಾರ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳಿಂದಾಗಿ ಜನರ ಜೀವನಾಧಾರ ವಸ್ತುಗಳಾದ ಅಕ್ಕಿ, ಬೇಳೆ, ಅಡುಗೆ ಅನಿಲ, ಪೆಟ್ರೋಲ್‌-ಡೀಸೆಲ್, ಓಷಧಿ ಮತ್ತಿತರ ಅಗತ್ಯ ಸಾಮಗ್ರಿಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸುತ್ತಿದ್ದಾರೆ.

          ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಡಿ.ಕೆ.ಶಿವಕುಮಾರ್ ಸರ್ಕಾರ ಸಹ ಬೆಲೆ ಏರಿಕೆಯ ಹೊರೆಯನ್ನು ಸಾರ್ವಜನಿಕರ ಮೇಲೆ ಹಾಕುತ್ತಿದೆ. ಇನ್ನೊಂದೆಡೆ ಕಾರ​‍್ೊರೇಟ್ ಬಂಡವಾಳಗಾರರಿಗೆ ಪ್ರೋತ್ಸಾಹ ಧನ ಹಾಗೂ ವಿವಿಧ ರಿಯಾಯಿತಿಗಳನ್ನು ನೀಡುತ್ತಿರುವುದು ತೀವ್ರ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಡಿವೈಎಫ್‌ಐ ಜಿಲ್ಲಾಧ್ಯಕ್ಷರು ಬಸವರಾಜ ಎಸ್ ಮಾತನಾಡಿ, ಹಾಲು, ಹಾಲಿನ ಉತ್ಪನ್ನಗಳು, ಬಸ್ ದರ ಸೇರಿದಂತೆ ದಿನ ಬಳಕೆ ವಸ್ತುಗಳ ದರವನ್ನು ವಿಪರೀತವಾಗಿ ಏರಿಕೆ ಮಾಡಿದ್ದು ಖಂಡನೀಯ. ಈ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವು ಜನರಿಂದ ನೇರ ಲೂಟಿ ಮಾಡಲು ಹೊರಟಿದೆ ಕೂಡಲೇ ಜನಸಾಮಾನ್ಯರ ಮೇಲಿನ ಆರ್ಥಿಕ ಹೊರೆಯನ್ನು ಇಳಿಸಬೇಕು. ದರ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು. 


ಸುದ್ದಿ ಓದಿ