ಮತದಾರರ ಜಾಗೃತಿಗೆ ಸ್ವೀಪ್ ಅಭಿಯಾನ ಯಶಸ್ವಿ
ಲೋಕದರ್ಶನ ವರದಿ
ಕಾರವಾರ ಆ.1: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡ ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ಸುಮಾರು 40 ಸಾವಿರಕ್ಕೂ ಹೆಚ್ಚು ಜನರನ್ನು ತಲುಪಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಸ್ವೀಪ್ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಮತದಾರರ ಜಾಗೃತಿ ಮೂಡಿಸುವ ಜೊತೆಗೆ ಪರಿಸರ ಸಂರಕ್ಷಣೆ, ಆರೋಗ್ಯ ತಪಾಸಣೆ, ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಮಹಿಳೆಯರಿಗೆ ಆತ್ಮರಕ್ಷಣೆ ಕುರಿತ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಮನೆಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ಪರೀಶೀಲನೆ ಕಾರ್ಯದಲ್ಲಿ ಶೇ.91ರಷ್ಟು ಪ್ರಗತಿ ಸಾಧಿಸಲಾಗಿದೆ. ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಅರ್ಹರು ಹೆಸರು ಸೇರೆ್ಡ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲೀಶ್ ಶಶಿ ಮಾತನಾಡಿ, ಸ್ವೀಪ್ ಕಾರ್ಯಕ್ರಮಗಳ ಯಶಸ್ಸಿಗೆ ವಿವಿಧ ಇಲಾಖೆ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರ ಸಹಕಾರ ಶ್ಲಾಘನೀಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.