ಸವದತ್ತಿ ಬಿಜೆಪಿ ಅಧ್ಯಕ್ಷ ವಿರೂಪಾಕ್ಷ ಮಾಮನಿ ಕಾರು ಅಪಘಾತದಲ್ಲಿ ಗಂಭೀರ ಗಾಯ
ಸವದತ್ತಿ 16 : ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಸವದತ್ತಿ ತಾಲೂಕು ಬಿಜೆಪಿ ಅಧ್ಯಕ್ಷ ವಿರೂಪಾಕ್ಷ ಮಾಮನಿ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹಂಚಿನಾಳ ಗ್ರಾಮದ ಹೊರವಲಯದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ವಿರೂಪಾಕ್ಷ ಮಾಮನಿ ಅವರು ಹಂಚಿನಾಳ ಗ್ರಾಮದ ಸಮೀಪ ತಮ್ಮ ಇನೋವಾ ಕಾರನ್ನು ರಸ್ತೆ ಬದಿ ನಿಲ್ಲಿಸಿ ಕೆಳಗಿಳಿದು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಯಲ್ಲಮ್ಮನಗುಡ್ಡದಿಂದ ನವಲಗುಂದ ಕಡೆಗೆ ಅತಿ ವೇಗವಾಗಿ ಹಾಗೂ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದ ಕಾರೊಂದು ಇವರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ವಿರೂಪಾಕ್ಷ ಮಾಮನಿ ಅವರ ತಲೆ, ಕೈ ಹಾಗೂ ಕಾಲುಗಳಿಗೆ ತೀವ್ರ ಸ್ವರೂಪದ ಪೆಟ್ಟುಬಿದ್ದಿದೆ. ಅಪಘಾತ ನಡೆಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಹಾಗೂ ಬೆಂಬಲಿಗರು ಅವರನ್ನು ರಕ್ಷಿಸಿ, ತುರ್ತು ಚಿಕಿತ್ಸೆಗಾಗಿ ಧಾರವಾಡದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಸದ್ಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಪರಿಸ್ಥಿತಿಯನ್ನು ಹತ್ತಿರದಿಂದ ನಿಗಾವಹಿಸಲಾಗಿದೆ. ಬರುವ ಸವದತ್ತಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ವಿರೂಪಾಕ್ಷ ಮಾಮನಿ ಅವರು ಈಗಾಗಲೇ ಕ್ಷೇತ್ರದಲ್ಲಿ ಸಕ್ರಿಯರಾಗಿ ಸುತ್ತಾಟ ನಡೆಸಿ, ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು.
ಚುನಾವಣಾ ಸಿದ್ಧತೆಯ ಈ ನಿರ್ಣಾಯಕ ಸಮಯದಲ್ಲಿಯೇ ಈ ಅನಾಹುತ ನಡೆದಿರುವುದು ಅವರ ಬೆಂಬಲಿಗರು, ಅಭಿಮಾನಿಗಳು ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ತೀವ್ರ ಆತಂಕ ಮತ್ತು ಕಳವಳವನ್ನುಂಟುಮಾಡಿದೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರೀಶೀಲನೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.