ಲೋಕದರ್ಶನ ವರದಿ
ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ -2025ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ಕೈಗೊಳ್ಳಿ -ಜಿಲ್ಲಾಧಿಕಾರಿ ಟಿ.ಭೂಬಾಲನ್
ವಿಜಯಪುರ 05: ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಕುರಿತಾಗಿ ದತ್ತಾಂಶ ಸಂಗ್ರಹಣಾ ಸಮೀಕ್ಷೆ ಕಾರ್ಯ ಪಾರದರ್ಶಕವಾಗಿ, ನಿಖರವಾಗಿ ಮಾಹಿತಿ ಸಂಗ್ರಹಿಸಬೇಕು. ಜಿಲ್ಲೆಯಾದ್ಯಂತ ಮೇ.5 ರಿಂದ 17ರ ವರೆಗೆ 12 ದಿನಗಳ ಕಾಲ ಜಿಲ್ಲೆಯ ಪರಿಶಿಷ್ಟ ಜಾತಿಗಳ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಪಾರದರ್ಶಕವಾಗಿ ನಿಯಮಗಳನ್ವಯ ಯಾವುದೇ ಗೊಂದಲ ಮಾಡಿಕೊಳ್ಳದೆ ಯಶಸ್ವಿಯಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿಗಳ ಕೇಸ್ವಾನ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿಗಳ ದತ್ತಾಂಶ ಶೇಖರಣಾ ಸಮಿಕ್ಷೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ನ್ಯಾಯಮೂರ್ತಿ ಎಚ್.ಎನ್ ನಾಗಮೋಹನದಾಸ ಅವರ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಿಗೆ ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಮಾಸ್ಟರ್ ಟ್ರೇನರಗಳ ಮೂಲಕ ಸಮರ್ಕವಾಗಿ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ. ಗಣತಿದಾರರು ಪ್ರತಿ ಮನೆ-ಮನೆಗೆ ಭೇಟಿ ನೀಡಿ ನಿಖರ ಮಾಹಿತಿ ಸಂಗ್ರಹಿಸಬೇಕು, ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ 2025ರ ಕುರಿತಂತೆ ಗ್ರಾಮ ಮಟ್ಟದಲ್ಲಿ ಡಂಗೂರ ಸಾರುವ ಮೂಲಕ ಜಿಲ್ಲೆಯ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಬಿಲ್‌ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಮೀಕ್ಷೆದಾರರರೊಂದಿಗೆ ಹಾಜರಿದ್ದು ಸಮೀಕ್ಷಾ ಕಾರ್ಯಕ್ಕೆ ಸಹಕಾರ ನೀಡುವಂತೆಯೂ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಬೇಕು. ಮಹಾನಗರ ಪಾಲಿಕೆ ಆಯುಕ್ತರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು. ಈ ಸಮೀಕ್ಷೆ ಕಾರ್ಯಗಳಿಗೆ ಈಗಾಗಲೇ ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು ಆಯಾ ತಾಲೂಕು ಮಟ್ವದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವ ಮೂಲಕ ನಿಗದಿತ ಅವಧಿಯಲ್ಲಿ ಸಮೀಕ್ಷೆ ಕಾರ್ಯ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೆಕು. ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿಕೊಂಡು ಸಮೀಕ್ಷೆ ಕಾರ್ಯ ನಿರ್ವಹಿಸಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಕೈ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ಈ ಕಾರ್ಯಕ್ಕೆ ಬೇಕಾದ ಎಲ್ಲ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಮೀಕ್ಷೆ ಕಾರ್ಯಕ್ಕಾಗಿ ನಿಯೋಜಿತರು ಪರಸ್ಪರ ಸಮನ್ವಯತೆ ಹಾಗೂ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಅವರು ಸೂಚಿಸಿದರು. ಗಣತಿ ಕಾರ್ಯಕ್ಕೆ ಬೇಕಾಗುವ ಅವಶ್ಯಕ ಸಾಮಗ್ರಿಗಳನ್ನು ಸಕಾಲದಲ್ಲಿ ಒದಗಿಸಬೇಕು. ಉಪವಿಭಾಗಾಧಿಕಾರಿಗಳು ಸಭೆ ನಡೆಸಿ ಅಗತ್ಯ ಸಲಹೆ ನೀಡುವ ಮೂಲಕ ಸಮೀಕ್ಷೆ ಕಾರ್ಯ ಯಶಸ್ವಿಗೊಳಿಸುವಂತೆ ಅವರು ಸೂಚಿಸಿದರು. ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು. ಮೂರು ಹಂತಗಳಲ್ಲಿ ಸಮೀಕ್ಷೆ ಕಾರ್ಯ ನಡೆಯಲಿದೆ. ಮೇ.5 ರಿಂದ 17 ರವರೆಗೆ ಪರಿಶಿಷ್ಟ ಜಾತಿಯ ಮನೆ-ಮನೆಗೆ ಭೇಟಿ ನೀಡುವ ಮೂಲಕ, ಮೇ-19 ರಿಂದ 21 ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳ ಮೂಲಕ ಸಮೀಕ್ಷೆ ನಡೆಸಲಾಗುವುದು. ಮೇ.19 ರಿಂದ 23ರವರೆಗೆ ಆನ್ ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು, ಸಹಾಯವಾಣಿ ಸಂಖ್ಯೆ 08352-255244 ಸಂಪರ್ಕಿಸಬಹುದಾಗಿದೆ ಎಂದು ಅವರು ಹೇಳಿದರು. ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪ ವಿಭಾಗಾಧಿಕಾರಿಗಳಾದ ಅನುರಾಧಾ ವಸ್ತ್ರದ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಾಜಶೇಖರ ಡಂಬಳ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌದಾಗರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲಿಕ ಮಾನವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕಿನ ತಹಶೀಲ್ಧಾರರು, ತಾಲೂಕು ಕಾರ್ಯನಿರ್ವಾಹಣಾಧಿಕಾರಿಗಳು ಉಪಸ್ಥಿತರಿದ್ದರು.