ಬಾಗಲಕೋಟೆ

ಶಾಲಾ ಕ್ರೀಡಾಕೂಟಕ್ಕೆ ಚಾಲನೆ

ಶಾಲಾ ಕ್ರೀಡಾಕೂಟಕ್ಕೆ ಚಾಲನೆ

ಲೋಕದರ್ಶನ ವರದಿ 

  ಬೀಳಗಿ 01: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಹೊನ್ನಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ. ಪಾಟೀಲ ಕರೆ ನೀಡಿದರು.  

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಹಾಗೂ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಜನಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೂ ಕ್ರೀಡೆಯಲ್ಲಿ ನೀರೀಕ್ಷಿತ ಸಾಧನೆ ಮಾಡಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಂಡು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂದು ಅವರು ಆಶಿಸಿದರು. ಮುಂದಿನ ಪೀಳಿಗೆಯನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ.

ಮಕ್ಕಳ ಶ್ರೇಯೋಭಿವೃದ್ಧಿಗೆ ಶಿಕ್ಷಕರು ಶ್ರಮಿಸಿ, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅಗತ್ಯ ಪ್ರೋತ್ಸಾಹ ನೀಡಬೇಕು ಎಂದರು. ಹೊನ್ನಿ ಚಿನ್ನದ ಗಣಿ ನಿಗಮದಿಂದ ಕ್ಷೇತ್ರದ 75 ಶಾಲೆಗಳಿಗೆ ಮೂಲಸೌಕರ್ಯ ಅಭಿವೃದ್ಧಿಗಾಗಿ ತಲಾ 2 ಲಕ್ಷ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಎಸ್‌. ಆದಾಪೂರ ಮಾತನಾಡಿ, ವಲಯ ಮಟ್ಟದಲ್ಲಿ ಗೆಲುವು ಸಾಧಿಸಿದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಪ್ರದರ್ಶಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಬೇಕು.

ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದರು. ಆನ್ಲೈನ್ ಗೇಮ್ಗಳಿಂದ ಮಕ್ಕಳ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದು, ಮಕ್ಕಳು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಎ.ಆರ್‌. ಪಾಟೀಲಮಠ, ಪಪಂ ಮುಖ್ಯಾಧಿಕಾರಿ ದೇವೇಂದ್ರ ಧನಪಾಲ, ಕ್ಷೇತ್ರ ಸಮನ್ವಯಾಧಿಕಾರಿ ಶಿವಾಜಿ ಕಾಂಬಳೆ, ದೈಹಿಕ ಶಿಕ್ಷಣ ಪರೀವೀಕ್ಷಕ ಎಸ್‌.ಎ. ಏತಿನಮನಿ ಸೇರಿದಂತೆ ವಿವಿಧ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ