ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಗವಿಮಠದ ಶ್ರೀಗಳ ಆಯ್ಕೆ ಹೆಮ್ಮೆ: ಅಮ್ಜದ್ ಪಟೇಲ್
ಕೊಪ್ಪಳ, ಅ. 2: ನಾಡಿನ ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ರ ಉದ್ಘಾಟಕರಾಗಿ ಕೊಪ್ಪಳದ ಶ್ರೀ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮೀಜಿಯವರನ್ನು ಆಯ್ಕೆ ಮಾಡಿರುವುದು ಕೊಪ್ಪಳ ಜಿಲ್ಲೆ ಹಾಗೂ ಉತ್ತರ ಕರ್ನಾಟಕದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಕೊಪ್ಪಳ ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ಶ್ರೀ ಗವಿಸಿದ್ದೇಶ್ವರ ಸ್ವಾಮೀಜಿಯವರು ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆ ಅಪಾರವಾಗಿದೆ. ಸರಳತೆ, ದಾಸೋಹ, ಶಿಕ್ಷಣ ಹಾಗೂ ಸಮಾಜಮುಖಿ ಚಿಂತನೆಯ ಮೂಲಕ ಶ್ರೀಗಳು ಜನರ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಯಂತಹ ಮಹತ್ವದ ಗೌರವ ಶ್ರೀಗಳಿಗೆ ಲಭಿಸಿರುವುದು ಕೊಪ್ಪಳ ಜಿಲ್ಲೆಯ ಜನರಲ್ಲಿ ಸಂತಸ ಮೂಡಿಸಿದೆ. ಇದರಿಂದ ಕೊಪ್ಪಳದ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಸೇವಾ ಪರಂಪರೆಗೆ ಮತ್ತಷ್ಟು ಗೌರವ ದೊರೆತಂತಾಗಿದೆ ಎಂದು ಅಮ್ಜದ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.