ಹಿರಿಯ ನಾಗರಿಕರ ದಿನಾಚರಣೆ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ-ಡಿಎಚ್‌ಓ
ಬಳ್ಳಾರಿ 09: ವಯಸ್ಸಾದಂತೆ ಸಾಮಾನ್ಯವಾಗಿ ಕಣ್ಣಿನ ಪೊರೆ, ಕಿವುಡುತನ, ರಕ್ತದೊತ್ತಡ, ಮಧುಮೇಹ, ಖಿನ್ನತೆ, ಬುದ್ಧಿಮಾಂದ್ಯತೆ, ನರಗಳ ಸಮಸ್ಯೆ, ಹೃದ್ರೋಗ, ಲಕ್ವ, ಮೂಳೆ ಮುರಿತ, ಅನಿಯಂತ್ರಿತ ಮೂತ್ರ ವಿಸರ್ಜನೆ ಹಾಗೂ ಮಲಬದ್ಧತೆಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ಎಲ್ಲಾ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಲಭ್ಯವಿದ್ದು, ಯಾರೂ ನಿರ್ಲಕ್ಷ್ಯ ತೋರದೆ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಮರಿಯಂಬಿ ವಿ.ಕೆ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಮಗ್ರ ಸಾಮಾಜಿಕ ಮತ್ತು ನೈತಿಕ ಅಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿರಿಯರು ಲಘು ನಡಿಗೆ, ನಿಯಮಿತ ವ್ಯಾಯಾಮ, ಸೂಕ್ತ ನಿದ್ರೆ ಹಾಗೂ ಪೌಷ್ಟಿಕ ಸಸ್ಯಾಹಾರಿ ಆಹಾರ ಸೇವಿಸಬೇಕು. ಸಾಮಾಜಿಕ ಚಟುವಟಿಕೆಗಳು ಹಾಗೂ ಮನರಂಜನೆಯಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ವೈದ್ಯರ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಂಬಾಕು, ಧೂಮಪಾನ, ಅತಿಯಾದ ಚಹಾ-ಕಾಫಿ ಸೇವನೆ ತ್ಯಜಿಸಬೇಕು ಹಾಗೂ ವೈದ್ಯರ ಸಲಹೆಯಿಲ್ಲದೆ ಸ್ವತಃ ಯಾವುದೇ ಓಷಧಿಗಳನ್ನು ತೆಗೆದುಕೊಳ್ಳಬಾರದು ಎಂದು ಕಿವಿಮಾತು ಹೇಳಿದರು.
ಈ ವರ್ಷದ ದಿನಾಚರಣೆಯನ್ನು ‘ಗೌರವಯುತ ವೃದ್ಧಾಪ್ಯ: ಹಿರಿಯ ನಾಗರಿಕರಿಗಾಗಿ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳ ಬಲವರ್ಧನೆ’ ಎಂಬ ಘೋಷೆಣೆಯೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಡಾ. ಜಬೀನ ತಾಜ್ ಅವರು, ರಾಷ್ಟ್ರೀಯ ವಯೋವೃದ್ಧರ ಕ್ಷೇಮಾಭಿವೃದ್ಧಿ ಕಾರ್ಯಕ್ರಮವು ಇಲಾಖೆಯ ಪ್ರಮುಖ ಯೋಜನೆಯಾಗಿದೆ. ಸಮಾಜದಲ್ಲಿ ವೃದ್ಧರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಲ್ಲಿ ಕಂಡುಬರುವ ಸಾಂಕ್ರಾಮಿಕ ಹಾಗೂ ಅಸಾಂಕ್ರಾಮಿಕ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ತಪಾಸಣೆ ಮತ್ತು ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಹಿರಿಯರು ಈ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.