ಹಿರಿಯ ನಟ ಹೆಚ್.ಜಿ. ಸೋಮಶೇಖರ ರಾವ್ ನಿಧನ
ಬೆಂಗಳೂರು, ನವೆಂಬರ್ 03: ಹಿರಿಯ ನಟ ಹೆಚ್ ಜಿ ಸೋಮಶೇಖರ ರಾವ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ಸೋಮಶೇಖರ ರಾವ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರಿಗೆ ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಅಭಿನಯದ ಛಾಪು ಮೂಡಿಸಿದವರು. ಪಾಶ್ಚಿಮಾತ್ಯ ಮತ್ತು ಭಾರತೀಯ ನಾಟಕಕರ್ತೃಗಳ ಕೃತಿಗಳನ್ನು ರಂಗಭೂಮಿಯ ಮೇಲೆ ಜೀವಂತಗೊಳಿಸಿದವರು.
ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ 1981ರಲ್ಲಿ ಚಿತ್ರರಂಗ ಪ್ರವೇಶಿಸಿದ ಸೋಮಣ್ಣ, ಅನಿಲ್ ಠಕ್ಕರ್ ಅವರ ಪ್ರತಿದ್ವಂದಿಯಾಗಿ ಇವರು ನೀಡಿದ ಅಭಿನಯ ಗಂಭೀರ ಪ್ರೇಕ್ಷಕರ ಮೆಚ್ಚುಗೆ ಗಳಿಸಿತು. ನಂತರ ಅನೇಕ ಚಿತ್ರಗಳಲ್ಲಿ ಭಾವಪ್ರಧಾನ ಮತ್ತು ಹಾಸ್ಯಪ್ರಧಾನ ಪಾತ್ರಗಳನ್ನು ನಿರ್ವಹಿಸಿದರು.
ರವಿ ನಿರ್ದೇಶನದ ‘ಮಿಥಿಲೆಯ ಸೀತೆಯರು’ಇವರ ಅಭಿನಯ ಸಾಮರ್ಥ್ಯವನ್ನು ಸರಿಯಾಗಿ ಗುರುತಿಸುವಂತೆ ಮಾಡಿತು. ರವಿಯವರೇ ನಿರ್ದೇಶಿಸಿದ ಇನ್ನೊಂದು ಚಿತ್ರ ‘ಹರಕೆಯ ಕುರಿ’ಯಲ್ಲಿ ಸೋಮಶೇಖರ ರಾಯರು ನೀಡಿದ ಸೊಗಸಾದ ಅಭಿನಯಕ್ಕಾಗಿ 1992 -93ನೇ ಸಾಲಿನ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಲಭಿಸಿತು. ಕೆನರಾ ಬ್ಯಾಂಕ್ನಲ್ಲಿ ಉನ್ನತ ಅಧಿಕಾರಿಯಾಗಿದ್ದು ನಿವೃತ್ತಿ ಹೊಂದಿದ ರಾಯರಿಗೆ ಕನ್ನಡ ರಂಗಭೂಮಿಗೆ ತಮ್ಮ ಸೇವೆಯನ್ನು ಸಲ್ಲಿಸುವುದೇ ನಿಜವಾದ ಕಾಯಕವಾಯಿತು. ಸೋಮಶೇಖರರಾಯರ ಬದುಕಿನ ಅನುಭವ ಕಥನವೂ ಸಹ ಪ್ರಕಟವಾಗಿದೆ.