ಜನರ ಸೇವೆಯೇ ಸರ್ಕಾರದ ಪ್ರಮುಖ ಜವಾಬ್ದಾರಿ: ರುದ್ರ್ಪ ಲಮಾಣಿ
ಲೋಕದರ್ಶನ ವರದಿ
ಹಾವೇರಿ, ಸೆ.19: ಬಡವರು, ದೀನದಲಿತರು, ಅಲ್ಪಸಂಖ್ಯಾತರು ಹಾಗೂ ರೈತರ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಜತೆಗೆ ಸೌಲಭ್ಯಗಳಿಂದ ವಂಚಿತರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ನಿಟ್ಟಿನಲ್ಲಿ ‘ಪ್ರಜಾಸೇವಾ’ ಆಂದೋಲನ ಮಹತ್ವದ ವೇದಿಕೆಯಾಗಿದೆ ಎಂದು ಸಕ್ಕರೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರುದ್ರ್ಪ ಲಮಾಣಿ ಹೇಳಿದರು. ಹಿರೇಕೆರೂರಿನ ಪಟ್ಟಣದ ಕಾರ್ಮಿಕರ ಭವನದಲ್ಲಿ ಶನಿವಾರ ನಡೆದ ‘ಪ್ರಜಾಸೇವಾ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನ ವಿವಿಧ ಇಲಾಖೆಗಳ ಸೇವೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ಪರೀಶೀಲಿಸಿ, ಸಾಧ್ಯವಾದಷ್ಟು ಶೀಘ್ರ ಪರಿಹಾರ ನೀಡಬೇಕು. ತಾಲೂಕು ಆಡಳಿತಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಬಗೆಹರಿಸಬೇಕು. ಜಿಲ್ಲಾಮಟ್ಟದ ವಿಷಯಗಳನ್ನು ಜಿಲ್ಲಾಧಿಕಾರಿಗಳು ಪರೀಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.