ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್‌ 19ರಂದು ಧರಣಿ

ರೈತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್‌ 19ರಂದು ಧರಣಿ  Sit-in protest on August 19 demanding fulfillment of farmers' demands


ವಿಜಯಪುರ ಆಗಸ್ಟ್‌ 16: ರಾಜ್ಯದ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಗಸ್ಟ್‌ 19ರಂದು ಬೆಳಿಗ್ಗೆ 10.30ಕ್ಕೆ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಕೆ.ಎಸ್‌. ಸುಧೀರಕುಮಾರ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ತಿಳಿಸಿದ್ದಾರೆ.  

ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 519.60 ಮೀಟರಿ​‍್ನಂದ 524.256 ಮೀಟರ್‌ಗೆ ಹೆಚ್ಚಿಸಿ ನೀರು ಸಂಗ್ರಹಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಮೂರನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಹಾಗೂ ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕು ಎಂದು ಸಂಘ ಒತ್ತಾಯಿಸಿದೆ.  

ರೈತರು ತಮ್ಮ ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕವಿಲ್ಲದೆ ಎದುರಿಸುತ್ತಿರುವ ಸಮಸ್ಯೆ ಪರಿಹರಿಸಬೇಕು. ಸರ್ಕಾರದ ಸುತ್ತೋಲೆಯನ್ನು ಮಾರಿ​‍್ಡಸಿ ಕಾನೂನು ತಿದ್ದುಪಡಿ ಮಾಡಿ ನ್ಯಾಯಾಲಯಕ್ಕೆ ತೆರಳಿ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ದಾರಿ ಸಮಸ್ಯೆ ಬಗೆಹರಿಸಬೇಕು. ರಾಜ್ಯದ ಎಲ್ಲ ತಹಶೀಲ್ದಾರರಿಗೆ ದಾರಿ ಬಿಡಿಸುವ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಆಗ್ರಹಿಸಲಾಗಿದೆ.  

ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಬರಪೀಡಿತ ಪ್ರದೇಶಗಳಲ್ಲಿ ತಕ್ಷಣ ಬರ ಪರಿಹಾರ ಘೋಷಿಸಬೇಕು. ಬಾಕಿ ಇರುವ ಕೇಂದ್ರ ಸರ್ಕಾರದ ?5,300 ಕೋಟಿ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಕೃಷಿಗಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳು ಹಾಗೂ ವಿವಿಧ ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಲಾಗಿದೆ.  

ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಬಾಜೀರಾಯನಹಳ್ಳಿಗೆ ಧರ್ಮಾ ನದಿಯನ್ನು ಜೋಡಿಸಿ,   ಮಧ್ಯದಲ್ಲಿ ಧರ್ಮಾ ಬಾಜೀರಾಯನ ಜಲಾಶಯ ನಿರ್ಮಿಸಬೇಕು. ಮಹಾದಾಯಿ ನದಿಯನ್ನು ಕಳಸಾ-ಬಂಡೂರಿ ಹಳ್ಳಗಳ ಮೂಲಕ ಜೋಡಿಸಿ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.  

ಧರಣಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಸಂಘಟನೆಯ ಕಾರ್ಯಕರ್ತರು ಹಾಗೂ ರೈತ ಬಾಂಧವರು ಆಗಮಿಸುವಂತೆ ಕೆ.ಎಸ್‌. ಸುಧೀರಕುಮಾರ್ ಮತ್ತು ಅರವಿಂದ ಕುಲಕರ್ಣಿ ಮನವಿ ಮಾಡಿದ್ದಾರೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ವಿಜಯಪುರದಿಂದ ಯಶವಂತಪುರಕ್ಕೆ ರೈಲಿನ ಮೂಲಕ ಪ್ರಯಾಣ ಬೆಳೆಸಲಾಗುವುದು ಎಂದು ತಿಳಿಸಿದ್ದಾರೆ.