ಬಳ್ಳಾರಿ

ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕರೆ

ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕರೆ

ಲೋಕದರ್ಶನ ವರದಿ 

           ಬಳ್ಳಾರಿ 25: ಇಂದಿನ ಒತ್ತಡದ ಜೀವನ ಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರ ಜೊತೆಗೆ ಕ್ರೀಡಾಸ್ಫೂರ್ತಿ ಮತ್ತು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್‌.ಕೆ ಅವರು ಹೇಳಿದರು. 

ಬುಧವಾರ ನಗರದ ಜಿಲ್ಲಾ ಪೊಲೀಸ್ ಕವಾಯತು (ಡಿಎಆರ್) ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2026 ಎಂಬ ಕಾರ್ಯಕ್ರಮಕ್ಕೆ ಬಲೂನ್‌ಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 

ಪೊಲೀಸ್ ಇಲಾಖೆಯ ಸಿಬ್ಬಂದಿ ದಿನನಿತ್ಯದ ಕರ್ತವ್ಯದ ಒತ್ತಡದ ನಡುವೆಯೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಿಬ್ಬಂದಿ ಉತ್ತಮ ಆರೋಗ್ಯ ಮತ್ತು ದೈಹಿಕ ಸಾಮರ್ಥ್ಯ ಹೊಂದಿದ್ದರೆ ಮಾತ್ರ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ. ಈ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು. 

ಕ್ರೀಡೆಗಳು ಕೇವಲ ಗೆಲುವು ಮತ್ತು ಸೋಲಿಗೆ ಸೀಮಿತವಾಗಿಲ್ಲ. ಅವು ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ಪರಸ್ಪರ ಸಹಕಾರ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡಾಕೂಟಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು. 


ಸುದ್ದಿ ಓದಿ