ಕ್ರೀಡಾ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಬೇಕು: ಶಾಸಕ ನಾಡಗೌಡ
ಮುದ್ದೇಬಿಹಾಳ ಸೆ.21: ಗ್ರಾಮೀಣ ಪ್ರದೇಶದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಿದರೆ, ಅವರು ವೈಯಕ್ತಿಕ ಸಾಧನೆಯೊಂದಿಗೆ ತಾವು ಪ್ರತಿನಿಧಿಸುವ ಪ್ರದೇಶದ ಕೀರ್ತಿಯನ್ನೂ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಬಹುದು ಎಂದು ಶಾಸಕ ಸಿ.ಎಸ್. ನಾಡಗೌಡ ಅಪ್ಪಾಜಿ ಹೇಳಿದರು.
ಪಟ್ಟಣದ ಓಸವಾಲ್ ಹಾಲ್ನಲ್ಲಿ ಭಾನುವಾರ ನಡೆದ ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಮಾಣಿಕ ಪರಿಶ್ರಮದಿಂದ ಯಶಸ್ಸು:
ಡಾ. ಚನ್ನವೀರ ಶಿವಾಚಾರ್ಯ ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಪ್ರಾಮಾಣಿಕ ಪರಿಶ್ರಮವಿದ್ದರೆ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತು ಯಶಸ್ಸು ಸಾಧಿಸಬಹುದು. ಕರಾಟೆ ಹಾಗೂ ರೋಲರ್ ಸ್ಕೇಟಿಂಗ್ನಲ್ಲಿ ವಿದ್ಯಾರ್ಥಿಗಳು ಪರಿಶ್ರಮಿಸುತ್ತಿರುವುದರಿಂದ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ ಎಂದರು.
ಸಾಹಿತಿ ಅಶೋಕ ಹಂಚಲಿ ಮಾತನಾಡಿ, ಒಲಿಂಪಿಕ್ಸ್ ಹಾಗೂ ಏಷ್ಯನ್ ಕ್ರೀಡಾಕೂಟಗಳಂತಹ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ವಿವಿಧ ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಮುದ್ದೇಬಿಹಾಳದ ಏಕಲವ್ಯ ರೋಲರ್ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ತಾಲ್ಲೂಕಿನ ಕೀರ್ತಿಯನ್ನು ಹೆಚ್ಚಿಸಲಿ ಎಂದು ಆಶಿಸಿದರು.
ರಾಜ್ಯ ಕರಾಟೆ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಾಗಿ ಅಧ್ಯಕ್ಷ ಮೊಹಮ್ಮದ್ ನದೀಮ್, ಪ್ರಧಾನ ಕಾರ್ಯದರ್ಶಿ ಕಟ್ಟೆ ಸ್ವಾಮಿ, ಗೌರವಾಧ್ಯಕ್ಷ ಲಕ್ಷ್ಮೀನಾರಾಯಣ ಆಚಾರ್ಯ, ಉಪಾಧ್ಯಕ್ಷರಾದ ಸತೀಶ್, ಮೌನೇಶ್ ಹಾಗೂ ವಿಶಾಲ್, ಖಜಾಂಚಿ ಶಿವಕುಮಾರ ಶಾರದಳ್ಳಿ, ಸಹ ಕಾರ್ಯದರ್ಶಿ ಪ್ರಕಾಶ ಉಜನಿಕೊಪ್ಪ ಮತ್ತು ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಸುಭಾಷ್ ವಿಜಯನಗರ ಅಧಿಕಾರ ವಹಿಸಿಕೊಂಡು ಪ್ರಮಾಣವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಕರಾಟೆ ಹಾಗೂ ರೋಲರ್ ಸ್ಕೇಟಿಂಗ್ನಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳು, ಪಾಲಕರು, ಕ್ರೀಡಾಭಿಮಾನಿಗಳು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.