ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ: ಪೂರ್ವಭಾವಿ ಸಭೆ
ಕೊಪ್ಪಳ 02: ಪ್ರಸಿದ್ಧ ಧಾರ್ಮಿಕ ಕ್ಷೇತ್ರವದ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವವು ಮೇ 13 ರಿಂದ ಪ್ರಾರಂಭವಾಗಲಿದ್ದು, ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಸಮರ್ಕ ವ್ಯವಸ್ಥೆ ಕಲ್ಪಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೊಪ್ಪಳ ಜಿಲ್ಲೆಯ ಹುಲಿಗಿ ಗ್ರಾಮದ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2025ರ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಸಂಸದರು ಮತ್ತು ಶಾಸಕರ ಉಪಸ್ಥಿತಿಯಲ್ಲಿ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಹುಲಿಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು. ಸಂಪರ್ಕ ರಸ್ತೆ ಹಾಗೂ ಬೈಪಾಸ್ ರಸ್ತೆಗಳನ್ನು ಸರಿಪಡಿಸಬೇಕು. ತಾತ್ಕಾಲಿಕವಾಗಿ ಸಾಮೂಹಿಕ ಸ್ನಾನದ ಗೃಹಗಳ ಮತ್ತು ಶೌಚಾಲಯಗಳ ವ್ಯವಸ್ಥೆಯನ್ನು ಸಹ ಕಲ್ಪಿಸಿಕೊಡಬೇಕು. ಜಾತ್ರಾ ಅವಧಿಯಲ್ಲಿ ನಿರಂತರ ವಿದ್ಯುತ್ ಸರಬರಾಜು, ದೇವಸ್ಥಾನದ ಗುಡಿ-ಗೋಪುರಗಳಿಗೆ ವಿದ್ಯುತ್ ಅಲಂಕಾರ ಮತ್ತು ಬೆಳಕಿನ ವ್ಯವಸ್ಥೆಯನ್ನು ಮಾಡಬೇಕು. ಸಿಸಿ ಕ್ಯಾಮರಾ ವ್ಯವಸ್ಥೆ ಸೇರಿದಂತೆ ಅಗತ್ಯ ಪೊಲೀಸ್ ಬಂದೋಬಸ್ತ್‌್ತ, ತುಂಗಭದ್ರ ಆಣೆಕಟ್ಟೆಯಿಂದ ನದಿಗೆ ನೀರು ಬಿಡುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಜಾತ್ರೆಗೆ ವಿವಿಧೆಡೆಯಿಂದ ಭಕ್ತಾಧಿಗಳು ಆಗಮಿಸಲಿದ್ದು, ಕೆ.ಕೆ.ಆರ್.ಟಿ.ಸಿ ಯವರು ಹೆಚ್ಚಿನ ಸಂಖ್ಯೆಯ ಬಸ್ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು. ಬಸ್‌ಗಳ ಮೇಲೆ ಜಿಲ್ಲೆಯ ಪ್ರವಾಸೋದ್ಯಮ ಸ್ಥಳಗಳ ಜಾಗೃತಿ ಪೋಸ್ಟರ್‌ಗಳನ್ನು ಭಿತ್ತರಿಸಬೇಕು. ಜಾತ್ರಾ ಸಮಯದಲ್ಲಿ ತಡೆ ರಹಿತ ರೈಲುಗಳನ್ನು ಮುನಿರಾಬಾದ್ ರೈಲು ನಿಲ್ದಾಣದಲ್ಲಿ ನಿಲುಗಡೆ ಮತ್ತು ಗೂಡ್ಸ್ ರೈಲುಗಳ ಸಂಚಾರಕ್ಕೆ ತಾತ್ಕಾಲಿಕ ತಡೆ ಕುರಿತಂತೆ ಹುಬ್ಬಳ್ಳಿ ರೈಲ್ವೆಗೆ ಪತ್ರ ಬರೆದು ಕ್ರಮ ಕೈಗೊಳ್ಳಬೇಕು. ಜಾತ್ರೆಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ದೇವಸ್ಥಾನಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಹುಲಿಗಿ ಗ್ರಾಮ ಪಂಚಾಯಿತಿಯಿಂದ ನೀಡಬೇಕು. ದೇವಸ್ಥಾನಕ್ಕೆ ಹೋಗುವ ರಸ್ತೆಯ ಮೇಲೆ ಅಂಗಡಿ ಮುಂಗಟ್ಟುಗಳನ್ನು ಇಡದಂತೆ ಕ್ರಮ ಕೈಗೊಳ್ಳಿ. ಜಾತ್ರಾ ಅವಧಿಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿಯಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಜಾತ್ರಾ ಸಮಯದಲ್ಲಿ ಮದ್ಯಪಾನವನ್ನು ಸಹ ನಿಷೇಧಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ದೇವಸ್ಥಾನದ ಮಹಾರಥಕ್ಕೆ ಲೋಕೋಪಯೋಗಿ ಇಲಾಖೆಯಿಂದ ಅರ್ಹತಾ ಪ್ರಮಾಣಪತ್ರ ಪಡೆಯಬೇಕಾಗಿದ್ದು, ಈ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಜಾತ್ರಾ ಸಮಯದಲ್ಲಿ ಅಗ್ನಿಶಾಮಕ ವಾಹನವನ್ನು ಕಾಯ್ದಿರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಮಾತನಾಡಿ, ಶ್ರೀ ಹುಲಿಗೆಮ್ಮ ದೇವಿ ಜಾತ್ರೆಗೆ ನಮ್ಮ ರಾಜ್ಯದ ವಿವಿಧ ಜಿಲ್ಲೆಗಳ ಮತ್ತು ಪಕ್ಕದ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸಲಿದ್ದು, ಅವರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಜನಸಂದಣಿ ಸಂದರ್ಭದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಮಸ್ಯೆಯಾಗಬಹುದು. ಇದರ ಬದಲಿಗೆ ದೇವಸ್ಥಾನದ ಸುತ್ತಮುತ್ತಲಿನಲ್ಲಿರುವ ಬೋರ್ವೆಲ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಿ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಬಸ್ ಸಂಚಾರಕ್ಕೆ ಗುರುತಿಸಲಾದ ಮಾರ್ಗವನ್ನು ಮುಂಚಿತವಾಗಿ ಪರೀಕ್ಷಿಸಿಕೊಂಡು ವಾಹನ ಚಾಲಕರಿಗೆ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಅತ್ಯಂತ ವಿಜ್ರಂಭಣೆಯಿಂದ ನಡೆಯಲಿರುವ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಹುಲಿಗೆಮ್ಮ ದೇವಿ ಜಾತ್ರೆಯಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನೀರೀಕ್ಷೆಯಿದ್ದು, ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಜೊತೆಗೆ ಜಾತ್ರೆಯನ್ನು ಸುವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಿ. ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕಾಗಿದ್ದು, ರಸ್ತೆಗಳ ಸ್ವಚ್ಛತೆಗೆ ಕೊಪ್ಪಳ ನಗರಸಭೆ ಮತ್ತು ತಾಲ್ಲೂಕು ಪಂಚಾಯತ್ ವತಿಯಿಂದ ಸ್ವಚ್ಛತಾ ಯಂತ್ರಗಳನ್ನು ಪೂರೈಸುವುದರ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಹೆಚ್.ಪ್ರಕಾಶ್‌ರಾವ್ ಅವರು ಮಾತನಾಡಿ, ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2025ರ ವಾರ್ಷಿಕ ಜಾತ್ರಾ ಮಹೋತ್ಸವದ ನಿಮಿತ್ತ ಮಹಾರಥೋತ್ಸವ ಮೇ 21 ರಂದು ಸಂಜೆ 5.30ಕ್ಕೆ ನಡೆಯಲಿದೆ. ಜಾತ್ರೆಯ ಪ್ರಯುಕ್ತ ಮೇ 13 ರಿಂದ 24 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ದು, ಎಲ್ಲಾ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ ವಿ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ.ಲಿಂಗರಾಜು, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ.ಮಲ್ಲಯ್ಯ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರರಾದ , ಕೊಪ್ಪಳ ತಹಶೀಲ್ದಾರ ವಿಠ್ಠಲ್ ಚೌಗಲಾ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ದುರಾದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಹುಲಿಗಿ ಗ್ರಾ.ಪಂ ಪಿಡಿಓ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.