ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು ನಿಮ್ಮ ಗುರಿ ಸಾಧಿಸಿ: ಜಿಲ್ಲಾ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಕರೆ
ಲೋಕದರ್ಶನ ವರದಿ
ಬಳ್ಳಾರಿ 20: ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ, ಜೀವನದಲ್ಲಿ ಸ್ಪಷ್ಟ ಗುರಿಯನ್ನು ಹೊಂದಿ ಅದನ್ನು ಸಾಧಿಸುವತ್ತ ಗಮನಹರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿದ್ದಲಿಂಗ ಪ್ರಭು ಅವರು ಕರೆ ನೀಡಿದರು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಕೀಲರ ಸಂಘ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ 'ಮಾದಕ ದ್ರವ್ಯ ಮುಕ್ತ ಭಾರತ' ವಿಶೇಷ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಯುವಜನತೆಯನ್ನು ದುಶ್ಚಟಗಳಿಗೆ ದೂಡಿ ಅವರ ಭವಿಷ್ಯವನ್ನು ಹಾಳು ಮಾಡಲು ಕೆಲವು ಕೆಟ್ಟ ಶಕ್ತಿಗಳು ಮಾದಕ ವಸ್ತುಗಳ ಸರಬರಾಜು ಮಾಡುತ್ತಿವೆ. ಇಂತಹ ವ್ಯಕ್ತಿಗಳ ಮಾತುಗಳಿಗೆ ಮರುಳಾಗದೆ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು. ತಂದೆ-ತಾಯಿಯ ಗೌರವ ಹೆಚ್ಚಿಸುವುದರ ಜೊತೆಗೆ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.
ದೇಶವು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದ್ದು, 2047ರ ವೇಳೆಗೆ ಜಾಗತಿಕ ಮಟ್ಟದಲ್ಲಿ ವಿಶೇಷ ಸ್ಥಾನಮಾನ ಪಡೆಯುವ ಗುರಿ ಹೊಂದಿದೆ. ಈ ಗುರಿ ಸಾಧನೆಯಲ್ಲಿ ಯುವಜನರ ಶಕ್ತಿ, ಸಾಮರ್ಥ್ಯ ಮತ್ತು ಬುದ್ಧಿವಂತಿಕೆ ಅತ್ಯಂತ ಮಹತ್ವದ್ದಾಗಿದೆ. ಗಾಂಜಾ ಸೇರಿದಂತೆ ಮಾದಕ ವಸ್ತುಗಳು ಯುವಜನರ ಮೇಲೆ ದುಷ್ಟರಿಣಾಮ ಬೀರುತ್ತಿದ್ದು, ಅವುಗಳಿಂದ ಸಂಪೂರ್ಣ ದೂರವಿರಬೇಕು ಎಂದು ಎಚ್ಚರಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಅವರು ಅಭಿಯಾನದ ಪ್ರತಿಜ್ಞಾವಿಧಿ ಬೋಧಿಸಿದರು.
ಯಾರಾದರೂ ಮಾದಕ ವಸ್ತುಗಳ ಸೇವನೆ ಅಥವಾ ಮಾರಾಟದಲ್ಲಿ ತೊಡಗಿರುವುದು ಕಂಡುಬಂದರೆ ಪೊಲೀಸರ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದು. ಯುವಕರು ಕುತೂಹಲಕ್ಕಾಗಿ ಮಾದಕ ವಸ್ತುಗಳನ್ನು ಪ್ರಯೋಗಿಸಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು. ಎನ್ಡಿಪಿಎಸ್ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳು ಗಂಭೀರ ಸ್ವರೂಪದ್ದಾಗಿದ್ದು, ಕಾನೂನಿನ ಪರಿಣಾಮಗಳ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿರಬೇಕು ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ವೀರೇಂದ್ರ ಕುಮಾರ್ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಸ್ನೇಹಿತರ ಒತ್ತಡ, ಗುಂಪಿನಿಂದ ಹೊರಗುಳಿಯುವ ಭಯ, ಕುತೂಹಲ ಹಾಗೂ ಪ್ರಯೋಗ ಮಾಡುವ ಆಸಕ್ತಿಯಿಂದ ಕೆಲವರು ಮಾದಕ ವಸ್ತುಗಳತ್ತ ಆಕರ್ಷಿತರಾಗುತ್ತಾರೆ ಎಂದರು.
ಚಲನಚಿತ್ರಗಳ ಪ್ರಭಾವವೂ ಯುವಜನರ ಮೇಲೆ ಪರಿಣಾಮ ಬೀರುತ್ತಿದೆ. ಇಂತಹ ಆಕರ್ಷಣೆಗಳಿಗೆ ಒಳಗಾಗದೆ ವ್ಯಸನಮುಕ್ತ ಜೀವನ ನಡೆಸಿ ಕುಟುಂಬ ಹಾಗೂ ಸಮಾಜಕ್ಕೆ ಉತ್ತಮ ಹೆಸರು ತರಬೇಕು ಎಂದರು. ಜಾಗೃತಿ ಕಾರ್ಯಕ್ರಮಗಳು ಕೇವಲ ಆಚರಣೆಗೆ ಸೀಮಿತವಾಗದೆ, ಜನರಲ್ಲಿ ನಿರಂತರ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರಳಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರಹ್ಲಾದ್ ಚೌದ್ರಿ. ಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.