ಮಾದಕ ವಸ್ತುಗಳಿಂದ ದೂರವಿದ್ದು ಶಿಕ್ಷಣಕ್ಕೆ ಆದ್ಯತೆ ನೀಡಿ

ಮಾದಕ ವಸ್ತುಗಳಿಂದ ದೂರವಿದ್ದು ಶಿಕ್ಷಣಕ್ಕೆ ಆದ್ಯತೆ ನೀಡಿ  Stay away from drugs and prioritize education


ಮುಂಡಗೋಡ 23 : ವಿದ್ಯಾರ್ಥಿಗಳು ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಮುಂಡಗೋಡ ಜೆಎಂಎಫ್ಸಿ ನ್ಯಾಯಾಧೀಶ ಶಿವರಾಜು ಎಚ್‌.ಎಸ್‌. ಕರೆ ನೀಡಿದರು. ಕರಗಿನಕೊಪ್ಪ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯ, ಮಾನಸಿಕ ಸ್ಥಿತಿ, ಸಾಮಾಜಿಕ ಬದುಕು ಹಾಗೂ ಶಿಕ್ಷಣದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಮಾಹಿತಿ ನೀಡಿದ ಅವರು, ಅಕ್ರಮ ಚಟುವಟಿಕೆಗಳು ಅಥವಾ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ಕಂಡುಬಂದಲ್ಲಿ ಕಾನೂನು ಸೇವಾ ಸಮಿತಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅಶೋಕ್ ಪವಾರ್, ವಕೀಲರು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ, ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.