ಕಾರವಾರ, 08: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿಷೇಧ ಕಾಯ್ದೆಯನ್ನು ಅತ್ಯಂತ ಕಟುನಿಟ್ಟಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯಾದ್ಯಂತ ವ್ಯಾಪಕ ರೀತಿಯಲ್ಲಿ ತಪಾಸಣಾ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಹಾಗೂ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಕಾಯ್ದೆಯಡಿ ನೇಮಕಗೊಂಡಿರುವ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಜಿಲ್ಲೆಯಲ್ಲಿ ವ್ಯಾಪಕ ತಪಾಸಣೆಗಳನ್ನು ನಡೆಸಬೇಕು, ಶಾಲೆಗಳಲ್ಲಿ 7 ದಿನಕ್ಕಿಂತ ಹೆಚ್ಚು ಗೈರು ಹಾಜರಾದ ಮಕ್ಕಳ ಹಾಜರಾತಿಯನ್ನು ಪರೀಶೀಲಿಸಿ ಅವರು ಬಾಲ ಕಾರ್ಮಿಕಪದ್ದತಿಗೆ ಒಳಗಾಗದೇ ಇರುವ ಬಗ್ಗೆ ಪರೀಶೀಲಿಸಬೇಕು, ಬಾಲ ಕಾರ್ಮಿಕರು ಕಂಡು ಬಂದಲ್ಲಿ ಅವರಿಗೆ ಸೂಕ್ತ ಪುರ್ನವಸತಿ ಸೌಲಭ್ಯಗಳನ್ನು ಒದಗಿಸಬೇಕು ಎಂದರು.
ಬಾಲ ಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳು ಮತ್ತು ಇದರ ನಿಷೇಧ ಕಾಯ್ದೆಯ ಬಗ್ಗೆ, ಇದರ ಉಲ್ಲಂಘನೆಯ ಕುರಿತ ದಂಡ ಮತ್ತು ಶಿಕ್ಷೆಯ ಬಗ್ಗೆ ಜಿಲ್ಲೆಯಲ್ಲಿನ ವಿವಿಧ ಸಂಸ್ಥೆಗಳ ಮಾಲೀಕರಿಗೆ ಅರಿವು ಮೂಡಿಸಬೇಕು, ಬಾಲ ಕಾರ್ಮಿಕರು ಕಂಡು ಬಂದಲ್ಲಿ ಸಂಬಂಧಪಟ್ಟ ಸಂಸ್ಥೆಯ ಮಾಲೀಕರ ವಿರುದ್ದ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಶಾಲಾ ಮಕ್ಕಳಿಗೆ ತಮ್ಮ ಸುತ್ತಮುತ್ತ ತಮ್ಮದೇ ವಯೋಮಾನದ ಬಾಲ ಕಾರ್ಮಿಕರು ಕಂಡುಬಂದಲ್ಲಿ ಮಕ್ಕಳ ಉಚಿತ ಸಹಾಯವಾಣಿ ಸಂಖ್ಯೆ 1098 ಗೆ ಮಾಹಿತಿ ನೀಡುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಬಾಲ ಮತ್ತು ಕಿಶೋರ ಕಾರ್ಮಿಕರು ಪತ್ತೆಯಾದಲ್ಲಿ ಸಂಬಂಧಪಟ್ಟ ಸಂಸ್ಥೆಗಳ ಮಾಲೀಕರಿಂದ ಕಾಪರ್ಸ ಫಂಡ್ ಮೊತ್ತವನ್ನು ಕಡ್ಡಾಯವಾಗಿ ವಸೂಲಿ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ದಂಡ ಪಾವತಿಸದೇ ಇರುವವರ ವಿವರಗಳನ್ನು ಜಿಲ್ಲಾಧಿಕಾರಿ ಕಚೇರಿಗೆ ಮತ್ತು ಸಂಬಂಧಪಟ್ಡ ವ್ಯಾಪ್ತಿಯ ತಹಶೀಲ್ದಾರ್ ಗಳಿಗೆ ನೀಡುವಂತೆ ಸೂಚಿಸಿದರು.
ಕಟ್ಟಡ ಕಾರ್ಮಿಕರ ಮಕ್ಕಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ವ್ಯಾಪಕವಾಗಿ ಅರಿವು ಮೂಡಿಸಬೇಕು, ಈ ಸೌಲಭ್ಯಗಳನ್ನು ಪಡೆಯುವ ಕುರಿತು ಅರ್ಜಿ ಸಲ್ಲಿಸುವ ಬಗ್ಗೆ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿರುವ ಅರ್ಜಿ ಲೈಬ್ರರಿಯನ್‌ಗಳಿಗೆ ತರಬೇತಿ ನೀಡುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತಾಲೂಕು ಮಟ್ಟದ ಬಾಲ ಕಾರ್ಮಿಕ ನಿರ್ಮೂಲನೆ ಮತ್ತು ಪುರ್ನವಸತಿ ಸಮಿತಿ ಹಾಗೂ ಕಾರ್ಯಪಡೆ ಸಮಿತಿ ಸಭೆಗಳನ್ನು ನಿಯಮಿತವಾಗಿ ನಡೆಸುವ ಮೂಲಕ ಜಿಲ್ಲೆಯ ಯಾವುದೇ ಭಾಗದಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕ ಪದ್ದತಿಯ ಯಾವುದೇ ಪ್ರಕರಣಗಳು ಕಂಡು ಬರದಂತೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನಿರ್ದೇಶನಗಳನ್ನು ನೀಡಿದರು.
ಏಪ್ರಿಲ್ 2024 ರಿಂದ ಮಾರ್ಚ್ 2025 ರ ವರೆಗೆ ಜಿಲ್ಲೆಯಾದ್ಯಂತ ಬಾಲ ಮತ್ತು ಕಿಶೋರ ಕಾರ್ಮಿಕರ ಪತ್ತೆಗೆ 1756 ತಪಾಸಣೆಗಳನ್ನು ಕೈಗೊಂಡಿದ್ದು, 6 ಬಾಲ/ಕಿಶೋರ ಕಾರ್ಮಿಕರನ್ನು ರಕ್ಷಿಸಿದ್ದು, 5 ಪ್ರಕರಣಗಳನ್ನು ದಾಖಲಿಸಲಾಗಿದೆ, ಕಾಯ್ದೆಯ ಕುರಿತಂತೆ ಜಿಲ್ಲೆಯಾದ್ಯಂತ ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು ಮತ್ತು ಕಾರ್ಯಗಾರಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಲಲಿತಾ ಮಾಹಿತಿ ನಿಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.