ಶಿಸ್ತು, ಪರಿಶ್ರಮದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ
ಲೋಕದರ್ಶನ ವರದಿ
ಹುಲಕೋಟಿ 24: ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಶಿಸ್ತು, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯ ಧಾರವಾಡ ಪ್ರಾದೇಶಿಕ ಕಚೇರಿಯ ಜಂಟಿ ನಿರ್ದೇಶಕಿ ಡಾ. ಸುಧಾ ಕೌಜಗೇರಿ ಹೇಳಿದರು.
ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿವಿಧ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾಲೇಜಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಇಲ್ಲಿನ ವಿದ್ಯಾರ್ಥಿಗಳ ಪ್ರಗತಿಯನ್ನು ನೋಡುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಹುಬ್ಬಳ್ಳಿಯ ಪಿ.ಸಿ. ಜಾಬಿನ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಠ್ಠಲ ರಾಜಪ್ಪ ವಾಘಮೋಡಿ ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳುವುದರಿಂದ ಅವರ ಸರ್ವಾಂಗೀಣ ವಿಕಸನ ಸಾಧ್ಯವಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅಪ್ಪಣ್ಣ ಎನ್. ಹಂಜೆ ಅವರು, ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾಲೇಜಿನ ಶೈಕ್ಷಣಿಕ ಶಿಸ್ತಿಗೆ ಎಲ್ಲರೂ ಬದ್ಧರಾಗಿರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಎನ್‌ಸಿಸಿ, ಎನ್‌ಎಸ್‌ಎಸ್, ರೋವರ್ಸ್, ರೇಂಜರ್ಸ್, ಕ್ರೀಡಾ ಹಾಗೂ ರೆಡ್‌ಕ್ರಾಸ್ ಘಟಕಗಳ ಪ್ರತಿನಿಧಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗ್ರಂಥಾಲಯ ವಿಭಾಗದ ಮೇಲ್ವಿಚಾರಕಿ ಪವಿತ್ರಾ ಬಿ.ಸಿ. ಕಾರ್ಯಕ್ರಮ ನಿರ್ವಹಿಸಿದರು. ಡಾ. ಸುಜಾತಾ ಬರದೂರ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.